Monday, June 16, 2025

Latest Posts

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

- Advertisement -

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಗೆಲ್ಲುತ್ತದೆ..

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಾಯ ಮಾಡಿದ್ದೇನೆ, ಹೊರತು ಬಿಜೆಪಿಗೆ ಸಹಾಯ ಮಾಡಿಲ್ಲ. ಅದರಲ್ಲೂ ಜನಾರ್ಧನ ರೆಡ್ಡಿಗೆ ಸಹಾಯವನ್ನೇ ಮಾಡಿಲ್ಲ. ಅವರು ಹೇಳಿದ್ದು ಅಪ್ಪಟ ಸುಳ್ಳಿನಿಂದ ಕೂಡಿದೆ. ನ್ಯಾಯಾಲಯ ಅವರಿಗೆ ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಗಂಗಾವತಿ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಗೆಲ್ಲುತ್ತದೆ. ಪ್ರಜಾಪ್ರಭುತ್ವದಲ್ಲಿ ಟೀಕಿಸುವುದು ಸಹಜ. ಆದರೆ ನಮ್ಮ ಸರ್ಕಾರದ ಸಾಧನೆ, ನಮ್ಮ ಬದ್ಧತೆಯ ಬಗ್ಗೆ ಜನರಿಗೆ ತಿಳಿದೇ ತಿಳಿಯುತ್ತದೆ ಎಂದು ಹೇಳಿದ್ದಾರೆ.

ಹೋರಾಟಕ್ಕೆ ಇಂದು ಫಲ ದೊರೆತಿದೆ..

2008 ರಿಂದ 2013ರವರೆಗೆ ವಿರೋಧಪಕ್ಷದ ನಾಯಕನಾಗಿ , ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಅಕ್ರಮ ಗಣಿಗಾರಿಕೆಯ ವರದಿ ಆಧರಿಸಿ, ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲಾಗಿತ್ತು. ಅಂದು ಬಿಜೆಪಿ ಸರ್ಕಾರ ಅದನ್ನು ವಿರೋಧಿಸಿತ್ತು. ಆಗ ಅಕ್ರಮ ಗಣಿಗಾರಿಕೆ ವಿರುದ್ಧ ನಡೆಸಿದ್ದ ಹೋರಾಟಕ್ಕೆ ಇಂದು ಫಲ ದೊರೆತಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು ಹಾಗೂ ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ಯಾರಂಟಿಗಳಿಗೆ ಹಣದ ಕೊರತೆಯಿಲ್ಲ..

ಇನ್ನೂ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ.

ನಮ್ಮ ಸರ್ಕಾರ ಅಧಿಕಾರದಲ್ಲಿರುವುದರಿಂದ ಇದನ್ನ ಜಾರಿ ತರಲಾಗಿದೆ..

ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ವಿಭಾಗಗಳನ್ನು ರಚಿಸಬೇಕೆಂದು ಅಂದಿನ ಬಿಜೆಪಿಯ ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ರವರು ಯೋಜಿಸಿದ್ದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನ ನೆಲೆಸಿದ್ದು, ಈ ನಗರದ ಆಡಳಿತವನ್ನು ಒಂದು ಮಹಾನಗರ ಪಾಲಿಕೆ ನಿರ್ವಹಿಸುವುದು ಕಷ್ಟಸಾಧ್ಯ. ಆದ್ದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಮಹಾನಗರಕ್ಕೆ ಮೂರು ಅಥವಾ ಹೆಚ್ಚು ಮಹಾನಗರಪಾಲಿಕೆಗಳನ್ನು ರಚಿಸಬೇಕೆಂಬ ಚಿಂತನೆಯಿಂದ ನನ್ನ ಹಿಂದಿನ ಮುಖ್ಯಮಂತ್ರಿಯ ಅವಧಿಯಲ್ಲಿ ಬಿ.ಎಸ್.ಪಾಟೀಲ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಆದ್ದರಿಂದ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ, ಈ ಚಿಂತನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದು ಗ್ರೇಟರ್‌ ಬೆಂಗಳೂರು ಅನುಷ್ಠಾನವನ್ನು ಸಿಎಂ ಸಮರ್ಥಿಸಿಕೊಂಡಿದ್ದಾರೆ.

ವರದಿ ಬಳಿಕ ತೀರ್ಮಾನ..

ಅಲ್ಲದೆ ಪ್ರಮುಖವಾಗಿ ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

- Advertisement -

Latest Posts

Don't Miss