27 ಲಕ್ಷ ಮಂದಿಗೆ ಮಧುಮೇಹ : ಮನೆ ಬಾಗಿಲಲ್ಲೇ ತಪಾಸಣೆ

ಬದಲಾದ ಜೀವನಶೈಲಿ, ಆಹಾರ ಪದ್ಧತಿ ಸೇರಿದಂತೆ ಹಲವು ಕಾರಣಗಳಿಂದ ರಾಜ್ಯದಲ್ಲಿ ಮಧುಮೇಹ ಸಮಸ್ಯೆ ಎದುರಿಸುತ್ತಿರುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಜಾರಿಗೆ ತಂದಿರುವ ‘ಗೃಹ ಆರೋಗ್ಯ’ ಯೋಜನೆಯಡಿ ನಡೆಸಿದ ತಪಾಸಣೆಯಲ್ಲಿ 27.62 ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಮಧುಮೇಹ ಪತ್ತೆಯಾಗಿದೆ.

ಆರಂಭಿಕ ಹಂತದಲ್ಲಿಯೇ ಮಧುಮೇಹ ಸೇರಿದಂತೆ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ‘ಗೃಹ ಆರೋಗ್ಯ’ ಯೋಜನೆಯಡಿ ರಾಜ್ಯದಾದ್ಯಂತ ಮನೆಮನೆಗೆ ತಪಾಸಣೆ ನಡೆಸಲಾಗುತ್ತಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ 2024ರ ಅಕ್ಟೋಬರ್‌ನಲ್ಲಿ ಕೋಲಾರ ಜಿಲ್ಲೆಯಲ್ಲಿ ಆರಂಭಿಸಲಾಗಿದ್ದು, 2025ರ ಜೂನ್‌ನಲ್ಲಿ ರಾಜ್ಯದಾದ್ಯಂತ ವಿಸ್ತರಿಸಲಾಗಿದೆ.

ಮಧುಮೇಹ ಪತ್ತೆಗೆ ಸಂಬಂಧಿಸಿ ನವೆಂಬರ್‌ವರೆಗೆ ನಡೆಸಿದ ತಪಾಸಣೆಯಲ್ಲಿ 13.29 ಲಕ್ಷ ಪುರುಷರು ಹಾಗೂ 14.33 ಲಕ್ಷ ಮಹಿಳೆಯರಲ್ಲಿ ಮಧುಮೇಹ ದೃಢಪಟ್ಟಿದೆ. ಇದೇ ವೇಳೆ, ಈ ವರ್ಷ ಏಪ್ರಿಲ್‌ನಿಂದ ನವೆಂಬರ್‌ವರೆಗೆ ತಪಾಸಣೆಗೆ ಒಳಪಟ್ಟ 32.99 ಲಕ್ಷ ಪುರುಷರಲ್ಲಿ 3.64 ಲಕ್ಷ ಮಂದಿ ಹಾಗೂ 33.92 ಲಕ್ಷ ಮಹಿಳೆಯರಲ್ಲಿ 4 ಲಕ್ಷ ಮಂದಿಯಲ್ಲಿ ಮಧುಮೇಹ ಸಮಸ್ಯೆ ಹೊಸದಾಗಿ ಪತ್ತೆಯಾಗಿದೆ.

ಯೋಜನೆಯಡಿ ಮಧುಮೇಹ ದೃಢಪಟ್ಟವರಿಗೆ ಅಗತ್ಯ ಔಷಧಗಳನ್ನು ಒದಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರಂಭಿಕ ಹಂತದ ಸಮಸ್ಯೆ ಎದುರಿಸುತ್ತಿರುವವರಿಗೆ ಜೀವನಶೈಲಿ ಬದಲಾವಣೆ, ಆಹಾರ ಪದ್ಧತಿ ಹಾಗೂ ಆರೋಗ್ಯ ನಿರ್ವಹಣೆ ಕುರಿತಂತೆ ವೈದ್ಯರನ್ನು ಒಳಗೊಂಡ ತಂಡದಿಂದ ನಿಯಮಿತ ಮಾರ್ಗದರ್ಶನ ನೀಡಲಾಗುತ್ತಿದೆ.

ಗ್ರಾಮೀಣ ಪ್ರದೇಶಗಳಲ್ಲಿ 30 ವರ್ಷ ಮೇಲ್ಪಟ್ಟವರನ್ನು ಗುರಿಯಾಗಿಸಿಕೊಂಡು ಯೋಜನೆಯಡಿ ತಪಾಸಣೆ ನಡೆಸಲಾಗುತ್ತಿದ್ದು, ಸಮುದಾಯ ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಒಳಗೊಂಡ ತಂಡವು 20.50 ಲಕ್ಷಕ್ಕೂ ಅಧಿಕ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿದೆ.

ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ಔಷಧಿಗಳನ್ನು ವಿತರಿಸಲಾಗುತ್ತಿದ್ದು, ಪ್ರತೀ ತಿಂಗಳು ಪರಿಶೀಲನೆ ನಡೆಸಿ ಮುಂದುವರಿಕೆಗೆ ಅಗತ್ಯವಿರುವ ಮಾತ್ರೆಗಳನ್ನು ಒದಗಿಸಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯ ಸಾಂಕ್ರಾಮಿಕವಲ್ಲದ ರೋಗಗಳ ವಿಭಾಗದ ಉಪ ನಿರ್ದೇಶಕ ಡಾ. ರಘುನಂದನ್, ಗೃಹ ಆರೋಗ್ಯ ಯೋಜನೆ ಸದ್ಯ ಗ್ರಾಮೀಣ ಪ್ರದೇಶಗಳಲ್ಲಿ ಜಾರಿಯಲ್ಲಿದ್ದು, ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಆರಂಭಿಕ ಹಂತದಲ್ಲಿಯೇ ರೋಗ ಪತ್ತೆಗೆ ಈ ಯೋಜನೆ ಪರಿಣಾಮಕಾರಿಯಾಗಿದೆ ಎಂದು ತಿಳಿಸಿದ್ದಾರೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

About The Author