ಬೆಂಗಳೂರು : ಯಾವುದೇ ವಿಷಯದಲ್ಲಿ ನಿರ್ದಿಷ್ಟವಾದ ವಿವರಗಳಿದ್ದಲ್ಲಿ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದು. ಪುರಾವೆಗಳಿಲ್ಲದ ಆಧಾರರಹಿತವಾದ ಹೇಳಿಕೆಗಳು ಉದ್ದೇಶಪೂರ್ವಕ ಹೇಳಿಕೆಗಳಾಗುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಂತರ ಆರೋಪ ಮಾಡಿರುವುದನ್ನು ಇಲ್ಲಿ ಗಮನಿಸಬಹುದು. ಕಳೆದ ಬಾರಿ ಸಂಘದವರು ಹೇಳಿದಂತೆ ಆದೇಶಗಳನ್ನು ಮಾಡಲಾಗಿತ್ತು. ನಿವೃತ್ತ ನ್ಯಾಯಾಧೀಶರ ನೇತೃತ್ವದ ಟೆಂಡರ್ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದೆ. ಅವರು ಕೇವಲ ಸಾಮಾನ್ಯ ಹೇಳಿಕೆ ನೀಡುವುದು ಜವಾಬ್ದಾರಿಯುತ ಹೇಳಿಕೆಯಾಗುವುದಿಲ್ಲ. ನಿರ್ದಿಷ್ಟವಾದ ವಿವರಗಳಿದ್ದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲು ಸಲಹೆ ನೀಡಿದ ಮುಖ್ಯಮಂತ್ರಿಗಳು ಲೋಕಾಯುಕ್ತಕ್ಕೆ ಸಂಪೂರ್ಣ ಸ್ವಾತಂತ್ರ್ಯವಿದ್ದು, ತನಿಖೆ ನಡೆಸುತ್ತದೆ. ಯಾರೇ ತಪ್ಪು ಎಸಗಿದ್ದರೂ ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದರು.
ಗುತ್ತಿಗೆದಾರರು ಈ ಬಗ್ಗೆ ಮಾನ್ಯ ಪ್ರಧಾನಮಂತ್ರಿಗಳಿಗೆ ದೂರು ಸಲ್ಲಿಸಲಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಈ ದೇಶದ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯುವ ಅಧಿಕಾರ ಎಲ್ಲರಿಗೂ ಇದೆ. ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹಿಸುವ ವ್ಯವಸ್ಥೆಯಿದೆ. ಕೋರ್ಟಿನ ಆದೇಶದ ನಂತರ ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರವಿದ್ದು, ನಿರ್ದಿಷ್ಟ ದೂರು ನೀಡಿದ್ದಲ್ಲಿ ತನಿಖೆಯಾಗುತ್ತದೆ ಎಂದರು.