ಕೊಪ್ಪಳ ಜಿಲ್ಲೆಯ ತುಂಗಭದ್ರಾ ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತ ನಡೆದಿದೆ. ಈ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಡಿಕ್ಕಿಯ ನಂತರ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ.
ಮಾಹಿತಿಯ ಪ್ರಕಾರ, ಹುಲಿಗೆಮ್ಮ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬಂದ ಟ್ಯಾಂಕರ್ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಟ್ರ್ಯಾಕ್ಟರ್ ಸೇತುವೆ ಮೇಲಿನ ನಿಯಂತ್ರಣ ಕಳೆದುಕೊಂಡು ನೇರವಾಗಿ ತುಂಗಭದ್ರಾ ನದಿಗೆ ಬಿದ್ದಿದೆ. ವಾಹನ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಸುತ್ತಿದ್ದ ಹಲವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಸ್ಥಳೀಯರು ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ ಹಾಗೂ ಕೊಪ್ಪಳ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಇತ್ತ ಆಸ್ಪತ್ರೆಯ ಹೊರಗೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತಂದೆ-ಮಗ ಸೇರಿದಂತೆ ಸಂಬಂಧಿಕರನ್ನು ಕಳೆದುಕೊಂಡವರ ದುಃಖ ನೋಡುಗರನ್ನೂ ಕಣ್ಣೀರಾಗಿಸಿದೆ. ಅಪಘಾತದ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




