Sunday, January 12, 2025

Latest Posts

ತುಳು ಭಾಷೆಯನ್ನು 2ನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು: ಸಿಎಂ

- Advertisement -

Mangaluru News: ಸಿಎಂ ಸಿದ್ದರಾಮಯ್ಯ ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಸಿಎಂ, ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌. ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ‌ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ‌ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರ್ಕಾರ ಎಂದು ಸಿಎಂ ಹೇಳಿದರು.

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂ. ಸಿಗುವಂತೆ ಮಾಡುವ ಜವಾಬ್ದಾರಿಯನ್ನು ನಮ್ಮ ಸರ್ಕಾರ ವಹಿಸಿಕೊಂಡಿದೆ. ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ನಮ್ಮ ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ.

ತಮ್ಮ ಮನೆ ಮಕ್ಕಳಂತೆ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ. 24 ಕಂಬಳಗಳನ್ನು ನಡೆಸಲು ಪ್ರತೀ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕಾರ ನೀಡಿದೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಯನ್ನು ಎರಡನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರು ಸ್ಪೀಕರ್ ಆಗುವ ಮೂಲಕ ಪ್ರೋಟೋಕಾಲ್ ಪ್ರಕಾರ ನನಗಿಂತ ಎತ್ತರದಲ್ಲಿದ್ದಾರೆ. ಮುಂದೆ ಇದಕ್ಕಿಂತ ಒಳ್ಳೆಯ ಅವಕಾಶಗಳು ಸಿಗಬಹುದು. ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಯು.ಟಿ.ಖಾದರ್ ಅವರು ಸ್ಪೀಕರ್ ಆದ ಬಳಿಕ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ₹1,000 ಕೋಟಿಯಷ್ಟು ಅನುದಾನ ತಂದಿದ್ದಾರೆ. ಕ್ಷೇತ್ರದ ಬಗ್ಗೆ ಅವರಿಗೆ ಅಷ್ಟೊಂದು ಪ್ರೀತಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

Latest Posts

Don't Miss