ಕೋವಿಡ್-19 ನಿಯಂತ್ರಣ, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
ಸಭೆಯಲ್ಲಿ ಗೃಹ ಸಚಿವ ಬಸವರಾಜ್ ಬೌಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಅಪರ ಮುಖ್ಯಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಸಚಿವರುಗಳು, ಜಿಲ್ಲಾಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅಲ್ಲದೇ, ಸಿಎಂ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿದರು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ 1 ವಾರದ ಲಾಕ್ ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಆತಂಕಪಡದೆ, ವದಂತಿಗಳಿಗೆ ಕಿವಿಗೊಡದೆ, ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದ್ದಾರೆ.
ಈ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಧಿಸಲಾಗಿದ್ದು, 1 ವಾರದೊಳಗೆ ವ್ಯವಸ್ಥೆಗಳನ್ನು ಸರಿಪಡಿಸಿಕೊಂಡು, ಎಲ್ಲ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.




