ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ.
ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ 38 ವರ್ಷದ ಲೋಹಿತ್ ಹೃದಯಾಘಾತದಿಂದ ಅಸುನೀಗಿದ್ದಾರೆ. ಬೇಲೂರಿನ 50 ವರ್ಷದ ಜೆಪಿ. ಲೇಪಾಕ್ಷಿ ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕ 58 ವರ್ಷದ ಮುತ್ತಯ್ಯ ಮತ್ತು ನುಗ್ಗೆಹಳ್ಳಿ ನಾಡಕಚೇರಿ ಡಿ ಗ್ರೂಪ್ ನೌಕರ 53 ವರ್ಷದ ಕುಮಾರ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ಲೋಹಿತ್ ಕಳೆದ 18 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ರಜೆಯಲ್ಲಿ ಊರಿಗೆ ಬಂದಿದ್ದ ಅವರು, ಜುಲೈ 3ರಂದು ರಜೆ ಮುಗಿಸಿ ಕರ್ತವ್ಯಕ್ಕೆ ಮರಳುವವರಿದ್ದರು ಆದರೆ ದುರದೃಷ್ಟವಶಾತ್ ಎನ್ನುವಂತೆ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಗ್ರಾಮದ ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ಗೆ ಭಾನುವಾರ ರಾತ್ರಿ ಮನೆಯಲ್ಲಿ ಮಲಗಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ಚನ್ನರಾಯಪಟ್ಟಣ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಾದ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಹೃದಯಘಾತ ಹೆಚ್ಚಾಗಲು ಕಾರಣ ಏನು ಎಂಬುದಕ್ಕೆ ತಜ್ಞರ ಮೂಲಕ ಮಾಹಿತಿ ತರಿಸಿಕೊಳ್ಳುತ್ತೇನೆ. ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಹಾಸನದ ಸಿದ್ದೇಶ್ವರ್ ನಗರದ ನಿವಾಸಿ 37 ವರ್ಷದ ಗೋವಿಂದ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಆಟೋ ಚಾಲಕರಾಗಿರುವ ಗೋವಿಂದ ಅವರಿಗೆ ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದರು ಆದರೆ ವಿಧಿ ಎಂಬಂತೆ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.
ಇದರ ಮಧ್ಯೆ ಹಾಸನ ಜಿಲ್ಲೆಯಲ್ಲಿ ಮತ್ತು ಕರ್ನಾಟಕದ ಇತರ ಕಡೆಗಳಲ್ಲಿ ಯುವಕ ಯುವತಿಯರಲ್ಲೇ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚಿಸಲು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿಎನ್ ಮಂಜುನಾಥ್ ಮುಂದಾಗಿದ್ದಾರೆ. ಹೃದಯಘಾತ ನಿಯಂತ್ರಣಕ್ಕೆ ಸಂಬಂಧಿಸಿ ಸಿಎನ್ ಮಂಜುನಾಥ್ ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಮತ್ತು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಯೂ ಚರ್ಚೆ ಮಾಡಿದ್ದಾರೆ.