ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಯಾಗಬೇಕು. ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ ಎಂದು ಮೈಸೂರು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಆಷಾಢ ಶುಕ್ರವಾರದ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗ ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು. ಇದರಿಂದ ಬರುವ ಭಕ್ತರಿಗೂ ಸಮಸ್ಯೆ ಆಗಬಾರದು ಎಂದಿದ್ದಾರೆ.
ತಿರುಪತಿ ತಿರುಮಲ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧಿಸಬೇಕು. ಇತ್ತೀಚಿಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೆಯೋ ಚಾಮುಂಡೇಶ್ವರಿ ದೇವಿಯ ಮೂಲ ವಿಗ್ರಹದ ವೀಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತದೆ. ಹಾಗಾಗಿ ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿಗೊಳಿಸಬೇಕು ಎಂದರು. ಚಾಮರಾಜನಗರ ಜಿಲ್ಲೆಯಲ್ಲಿ ಹುಲಿಗಳು, ಕೋತಿಗಳ ಹತ್ಯೆ ಪ್ರಕರಣ ಕುರಿತು ಪ್ರತಿಕ್ರಿಯಿಸಿ, ಹುಲಿ ಸಾವಿನ ಬಗ್ಗೆ ಚಾಮರಾಜನಗರದ ಯಾವುದೇ ಜನಪ್ರತಿನಿಧಿಗಳು ಧ್ವನಿ ಎತ್ತುತ್ತಿಲ್ಲ.
ಇದೊಂದು ಗಂಭೀರ ಸಮಸ್ಯೆಯಾಗಿದ್ದು ಯಾಕೆ ಅವರಿಗೆ ಅರ್ಥ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರದ ಬಗ್ಗೆ ಕೂಡ ಸದನದಲ್ಲಿ ನಾನೊಬ್ಬನೇ ದನಿ ಎತ್ತುತ್ತಿದ್ದೇನೆ. ಚಾಮರಾಜನಗರ ಜನಪ್ರತಿನಿಧಿಗಳು ಇನ್ನಾದರೂ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಕರಣ ಸಂಬಂಧ ಅರಣ್ಯ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಆಗಬೇಕು. ಇನ್ನು, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರದಲ್ಲಿ ನಾನೇನೂ ಹೇಳಲಾರೆ. ಪಕ್ಷದ ಆಂತರಿಕ ವಿಚಾರವನ್ನು ಬಹಿರಂಗವಾಗಿ ಮಾತನಾಡುವುದಿಲ್ಲ. ಹೈಕಮಾಂಡ್ ಸೂಕ್ತ ನಿರ್ಧಾರ ಮಾಡಲಿದೆ ಎಂದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ