Friday, July 11, 2025

Latest Posts

ನೋ ಚೇಂಜಸ್‌.. DK ಸೈಲೆಂಟ್ ಯಾಕೆ: ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ!

- Advertisement -

ಸಿಎಂ ಬದಲಾವಣೆ ಕೂಗು ದಿನಕ್ಕೊಂದು ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ ವಿಚಾರದಲ್ಲಿ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅಲ್ಲಿ ರಾಹುಲ್‌ ಗಾಂಧಿ ಜೊತೆ ಚರ್ಚೆಗೂ ಮುನ್ನವೇ ನಾನೇ ಐದು ವರ್ಷ ಸಿಎಂ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ.

ಮಾತು ಮುಂದುವರೆಸಿದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ನಮ್ಮ ಜತೆಗಿದ್ದಾರೆ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೂ ನಮ್ಮ ಜತೆಗಿದ್ದರು. ಕೆಲವು ಶಾಸಕರು ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಹೌದು ಆದರೆ, ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ಮಾಡುತ್ತೇನೆ ಎಂದು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದಿದ್ದಾರೆ. ಡಿಕೆಶಿ ಕೂಡ ಸಿಎಂ ಹುದ್ದೆ ಆಕಾಂಕ್ಷಿ ನಿಜ. ಆದರೆ ನಾನೇ 5 ವರ್ಷ ಅಧಿಕಾರ ಪೂರೈಸುತ್ತೇನೆ. ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಡಿಕೆ ಶಿವಕುಮಾರ್ ಅವರೇ ಸ್ಪಷ್ಟಪಡಿಸಿದ್ದಾರೆ. ನಮ್ಮದು ಹೈಕಮಾಂಡ್ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುವ ಪಕ್ಷ. ಹೀಗಾಗಿ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ನಾವು ಪಾಲಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೆಲವು ಮಂದಿ ಶಾಸಕರು ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಬಳಿ ಅಭಿಪ್ರಾಯ ವ್ಯಕ್ತಪಡಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅದು ನಿಜ. ಕೆಲವು ಮಂದಿ ಶಾಸಕರು ಅಭಿಪ್ರಾಯ ಡಿಕೆ ಶಿವಕುಮಾರ್ ಪರ ಬೆಂಬಲ ಸೂಚಿಸಿದ್ದಾರೆ. ಆದರೆ, ಅದು ಕೆಲವೇ ಕೆಲವು ಸಂಖ್ಯೆಯಲ್ಲಿ. ಹಾಗೆಂದು ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನೂ ಅದಕ್ಕೆ ಬದ್ಧನಾಗಿರಬೇಕು, ಡಿ.ಕೆ ಶಿವಕುಮಾರ್ ಅವರೂ ಅಷ್ಟೇ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಮಾತುಕತೆ ವೇಳೆ ಎರಡೂವರೆ ವರ್ಷದಲ್ಲಿ ಅಧಿಕಾರ ಹಂಚಿಕೆ ಒಪ್ಪಂದವಾಗಿತ್ತೇ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ‘ಇಲ್ಲ’ ಎಂದಿದ್ದಾರೆ. ಈ ರೀತಿಯಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ. ನಾಯಕತ್ವ ಬದಲಾವಣೆಯ ವಿಚಾರ ಸಂಬಂದ ಯಾವುದು ಒಪ್ಪಂದ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರ ಈ ಹೇಳಿಕೆಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮೌನಕ್ಕೆ ಜಾರಿಯಾಗಿದ್ದಾರೆ. ಡಿಕೆ ಶಿವಕುಮಾರ್ ಇಂದು ಹೈಕಮಾಂಡ್ ನಾಯಕರ ಭೇಟಿಯಾಗಿ ತಮ್ಮ ಬೇಡಿಕೆಯನ್ನು ಸಲ್ಲಿಸುವ ಸಾಧ್ಯತೆ ಇದೆ.

 

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss