ಮಳೆ ಹಿನ್ನಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಲವು ದಿನಗಳ ಹಿಂದೆ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಆರ್ಭಟಿಸಲು ಶುರು ಮಾಡಿದೆ. ಜಿಲ್ಲೆಗಳಲ್ಲಂತೂ ಹವಾಮಾನ ಇಲಾಖೆ ಮತ್ತು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ರೆಡ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರ ಪರಿಣಾಮ ಜುಲೈ-17 ರಂದು ಕೆಲ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನಜೀವನದ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸ್ಥಳೀಯ ಆಡಳಿತವು ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದೆ.
ಕಡಿಮೆ ಎತ್ತರದ ಪ್ರದೇಶಗಳಲ್ಲಿ ಪ್ರವಾಹದ ಆತಂಕದಿಂದ ಹಾಗೂ ಮಕ್ಕಳು ಮತ್ತು ಶಿಕ್ಷಕರ ಸುರಕ್ಷತೆಗಾಗಿ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದಿಂದ ಈ ಪ್ರದೇಶಗಳಲ್ಲಿ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಇದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಕಾರಣ ಭೂಕುಸಿತ ಸಂಭವಿಸಬಹುದೆಂದು ಎಚ್ಚರಿಕೆ ನೀಡಲಾಗಿದೆ. ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಪ್ರವಾಸ ಯೋಜನೆಗಳನ್ನು ಮುಂದೂಡಲು ಸಲಹೆ ನೀಡಲಾಗಿದೆ.
ವರದಿ : ಲಾವಣ್ಯ ಅನಿಗೋಳ

