ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ.
ಈ ನಡುವೆ ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ. ಸಾಂವಿಧಾನಿಕ ಸಂಸ್ಥೆಗಳನ್ನು ಪ್ರಶ್ನಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಈ ಕೂಡಲೇ ರಾಜ್ಯದ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
ಕೈ ನಾಯಕರ ಆರೋಪಕ್ಕೆ ಕೆಂಡವಾಗಿರುವ ವಿಜಯೇಂದ್ರ, ಚುನಾವಣಾ ಆಯೋಗವನ್ನು ನಿಜವಾಗಿಯೂ ಬಿಜೆಪಿ ದುರುಪಯೋಗಪಡಿಸಿಕೊಂಡಿದ್ದರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 134 ಸ್ಥಾನಗಳೊಂದಿಗೆ ಕರ್ನಾಟಕದಲ್ಲಿ ಹೇಗೆ ಅಧಿಕಾರಕ್ಕೆ ಬರುತ್ತಿತ್ತು? ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಾಧ್ಯವಿತ್ತೇ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಗೆಲ್ಲಲಿಲ್ಲವೇ? ಚುನಾವಣೆಗಳನ್ನು ತಿರುಚಿದ್ದರೆ ಅದು ಹೇಗೆ ಸಾಧ್ಯವಾಯಿತು? ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯನ್ನು ಪ್ರಶ್ನಿಸುವುದು ಸಂಸ್ಥೆಗೆ ಮಾಡಿದ ಅವಮಾನವೇ ಆಗಿದೆ. ಅಲ್ಲದೆ ಇದೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯವೂ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಾಂವಿಧಾನಿಕ ಸಂಸ್ಥೆಗಳನ್ನು ಪ್ರಶ್ನಿಸುವುದರ ಮೂಲಕ ಕಾಂಗ್ರೆಸ್ ಅವುಗಳ ಬಗ್ಗೆ ಜನರಲ್ಲಿರುವ ಭಾವನೆಗಳಿಗೆ ಕೊಡಲಿ ಪೆಟ್ಟು ನೀಡಲು ಮುಂದಾಗಿದೆ. ಚುನಾವನಾ ಆಯೋಗದ ಸಮಗ್ರತೆಯನ್ನು ಪ್ರಶ್ನಿಸುವ ಮೂಲಕ ಸಾರ್ವಜನಿಕರ ಮನಸ್ಸಿನಲ್ಲಿ ಅನುಮಾನದ ಬೀಜಗಳನ್ನು ಬಿತ್ತುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕರ ಹೇಳಿಕೆಗಳು ನಿಜಕ್ಕೂ ಅಪಾಯಕಾರಿ ಬೆಳವಣಿಗೆಯಾಗಿದೆ. ಇದು ಅವರ ಪಕ್ಷದ ತುರ್ತು ಪರಿಸ್ಥಿತಿಯ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಅದರಿಂದ ಅವರಿನ್ನೂ ಹೊರಬಂದಿಲ್ಲ ಎನ್ನುವುದನ್ನೂ ಪ್ರತಿಬಿಂಬಿಸುತ್ತದೆ. ಸುಪ್ರೀಂ ಕೋರ್ಟ್ನಲ್ಲಿ ಮತದಾರರ ಪಟ್ಟಿ ಮತ್ತು ಚುನಾವಣೆಗಳ ವಿಷಯವಿದೆ. ಈ ರೀತಿಯ ಅಂತಹ ಹೇಳಿಕೆಗಳನ್ನು ನ್ಯಾಯಾಲಯದಲ್ಲಿ ನೀಡಬೇಕು ಹೊರತು ಸಾರ್ವಜನಿಕ ವೇದಿಕೆಗಳಲ್ಲಿ ಅಲ್ಲ ಎಂದು ವಿಜಯೇಂದ್ರ ಕಾಂಗ್ರೆಸ್ ನಾಯಕರು ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

