ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವುದು ಖುಷಿಯ ವಿಚಾರವಾದರೆ. ಭರ್ತಿಯಾಗಿ ಒಂದೂವರೆ ತಿಂಗಳು ಕಳೆದರೂ ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನ ಕೊನೇ ಭಾಗದ ರೈತರಿಗೆ ನೀರು ತಲುಪಿಲ್ಲ. ಕೆರೆ ಕಟ್ಟೆಗಳನ್ನು ತುಂಬಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ತಮಿಳುನಾಡಿಗೆ ಹೆಚ್ಚುವರಿಯಾಗಿ ನೀರು ಹರಿದು ಹೋಗುತ್ತಿದ್ದರೂ, ಇದನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ನೀರು ನಿರ್ವಹಣೆಯಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಡವಿದ್ದಾರೆ ಎಂದು ದೂರಿದರು. ಇದೇ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ಜಲಾಶಯ ಭರ್ತಿಯಾದ ಸಂದರ್ಭದಲ್ಲೂ ಕೆರೆ-ಕಟ್ಟೆಗಳನ್ನು ತುಂಬಿಸದೇ ಇರುವುದು ಸರಿಯಲ್ಲ. ಮದ್ದೂರು ಮತ್ತು ಮಳವಳ್ಳಿ ತಾಲ್ಲೂಕಿನ ಕೊನೆಯ ಭಾಗದ ಕೆರೆಗಳಿಗೆ ನೀರು ತುಂಬಿಸಲು ನೀರು ಅಚ್ಚುಕಟ್ಟು ಪ್ರದೇಶಕ್ಕೆ ಹೋಗಿ ನಂತರ ಹೋಗಬೇಕು ಎಂದಿದ್ದರೆ ಅಥವಾ ಬೇರೆ ತೊಂದರೆಯಿದ್ದಲ್ಲಿ, ಆಯಾ ತಾಲ್ಲೂಕಿನ ಶಾಸಕರನ್ನು ಭೇಟಿ ಮಾಡಿ ತೊಂದರೆಗಳನ್ನು ನಿವಾರಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಈ ಬಾರಿ ಮಳೆಯಿಂದ 4 ಸಂಪೂರ್ಣ ಶಿಥಿಲ, 60 ಭಾಗಶಃ ಶಿಥಿಲ ಸೇರಿದಂತೆ ಒಟ್ಟು 66 ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೊಡುತ್ತಿರುವ ಅನುದಾನ ಕಡಿಮೆಯಿದೆ. ಹೀಗಾಗಿ ಪೂರ್ಣ ಶಿಥಿಲಗೊಂಡ ಮನೆಯ ಸಂತ್ರಸ್ತರಿಗೆ ರಾಜೀವ್‌ಗಾಂಧಿ ವಸತಿ ಯೋಜನೆಯಡಿ ಸೌಲಭ್ಯ ಕಲ್ಪಿಸಬೇಕು. ಮನೆ ಬಿದ್ದ ಸಂದರ್ಭದಲ್ಲಿ ಅಧಿಕಾರಿಗಳು ಕೂಡಲೇ ಸರ್ವೆ ಮಾಡಿಸಿ, ವಾರದೊಳಗೆ ಪರಿಹಾರ ನೀಡಬೇಕು ಎಂದು ತಾಕೀತು ಮಾಡಿದರು.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ