ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತದ ಸ್ಥಿತಿ ಉಂಟಾಗಿದೆ. ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಚುರುಕುಗೊಂಡಿದ್ದು, ಆ.24ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಹಿನ್ನೆಲೆಯಲ್ಲಿ, ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಹಾವೇರಿ, ಕೊಡಗು, ಹಾಸನಗೆ ಆರೆಂಜ್ ಅಲರ್ಟ್ ಹಾಗು ಮೈಸೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಬೀದರ್, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದಲ್ಲದೆ, ರಾಮನಗರ, ವಿಜಯನಗರ, ತುಮಕೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರಿ ಮಳೆಯಿಂದಾಗಿ 7 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತದ ನಂತರ ಸಂಚಾರ ಪುನಃಸ್ಥಾಪನೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಲಾ-ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತಾ ಕ್ರಮವಾಗಿ ಆಗಸ್ಟ್ 18 ರಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಅದೇ ರೀತಿ ಚಿಕ್ಕಮಗಳೂರು, ಉತ್ತರ ಕನ್ನಡದಲ್ಲೂ ಕೂಡ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.