ಮುಂದಿನ ಎರಡು ಮೂರೂ ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಭಾರಿ ಮಳೆಯ ಎಚ್ಚರಿಕೆಯನ್ನ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ, ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ವಿಶೇಷವಾಗಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚುವ ನಿರೀಕ್ಷೆಯಿದೆ. ಈಗಾಗಲೇ ನಗರದ ಕೆಲವೊಂದು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದೆ. ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಿಂದಾಗಿ ವಾಯುವಿನಲ್ಲಿ ಇರುವ ಮಾಲಿನ್ಯಕಾರಕಗಳು ನೆಲೆಗೆ ಬೀಳುವ ಸಾಧ್ಯತೆ ಇದೆ.
ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆಯುವ ನಿರೀಕ್ಷೆಯಿದೆ. ಆದರೆ ಸೆಪ್ಟೆಂಬರ್ 11ರವರೆಗೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಗು ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಕೂಡ ಮಳೆಯಾಗಲಿದೆ.
ರಾಷ್ಟ್ರದ ಹಲವೆಡೆ ಸೆಪ್ಟೆಂಬರ್ ತಿಂಗಳಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಇತ್ತೀಚೆಗೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ, ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿ 167.9 ಮಿ.ಮೀ ಮಳೆಯಾಗುತ್ತದೆ. ಈ ಬಾರಿ, ಸಾಮಾನ್ಯಕ್ಕಿಂತ ಶೇ.109ರಷ್ಟು ಹೆಚ್ಚಿನ ಮಳೆಯಾಗುವ ಸೂಚನೆಗಳಿವೆ ಎಂದು ಇಲಾಖೆ ತಿಳಿಸಿತ್ತು.