ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ: ಆರ್.ಅಶೋಕ್

Political News: ರಾಜ್ಯದಲ್ಲಿ ಬಿಜೆಪಿ ಕಾಂಗ್ರೆಸ್ ನಡುವಿನ ಹಗ್ಗಜಗ್ಗಾಟ ಜೋರಾಗಿಯೇ ಇದೆ. ಆರೋಪ- ಪ್ರತ್ಯಾರೋಪಗಳು ಕೂಡ ನಡೆಯುತ್ತಲೇ ಇದೆ. ಹೀಗಿರುವಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯ ಸರ್ಕಾರ, ತಮ್ಮ ಶಾಸಕ, ಸಚಿವರಿಗೇ ಅವರವರ ಕ್ಷೇತ್ರದ ಅಭಿವೃದ್ಧಿಗೆ ಹಣ ನೀಡದ ವಿಷಯಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯರಿಗೆ ತಿವಿದಿದ್ದಾರೆ.

ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು ಮುಖ್ಯಮಂತ್ರಿಗಳ ಬಳಿ ಅಂಗಲಾಚಬೇಕು ಅಂದರೆ ಕಾಂಗ್ರೆಸ್ ಸರ್ಕಾರ ಎಷ್ಟು ದಿವಾಳಿ ಅನ್ನುವುದನ್ನ ನೀವೇ ಊಹಿಸಿಕೊಳ್ಳಿ ಎಂದು ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು “ಅನುದಾನಕ್ಕಾಗಿ ಮುಖ್ಯಮಂತ್ರಿಗಳ ಕಾಲಿಗೆ ಬೀಳಬೇಕು” ಎನ್ನುತ್ತಾರೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರಾದ ಶ್ರೀ ಬಸವರಾಜ ರಾಯರೆಡ್ಡಿ ಅವರು “ನಿಮಗೆ ರಸ್ತೆ ಬೇಕಾದ್ರೆ ಗ್ಯಾರೆಂಟಿ ಯೋಜನೆ ಬಂದ್ ಮಾಡ್ತೀವಿ” ಎನ್ನುತ್ತಾರೆ.

ಶಾಸಕ ಗವಿಯಪ್ಪನವರಂತೂ ಪಾಪ ಒಂದು ಹೆಜ್ಜೆ ಮುಂದೆ ಹೋಗಿ “ಇದೇ ರೀತಿ ಮುಂದುವರಿದೆ ಮುಂದಿನ ದಿನಗಳಲ್ಲಿ ವಿಧಾನಸೌಧದ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ”, ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದು ಅಶೋಕ್ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

ಇನ್ನು ಶಾಸಕರಾದ ಬಿ.ಆರ್. ಪಾಟೀಲರು, ರಾಜು ಕಾಗೆ ಅವರು ಸೇರಿದಂತೆ ಅನೇಕ ಶಾಸಕರು ಅನುದಾನವಿಲ್ಲದೆ ತಮ್ಮ ಕ್ಷೇತ್ರಗಳಲ್ಲಿ ತಲೆ ಎತ್ತಿಕೊಂಡು ಓಡಾಡಲೂ ಆಗುತ್ತಿಲ್ಲ ಎನ್ನುವುದರ ಬಗ್ಗೆ ಸೂಪರ್ ಸಿಎಂ ಸುರ್ಜೆವಾಲಾ ಅವರಿಗೆ ದೂರು ಕೊಟ್ಟಿರುವುದನ್ನ ಮಾಧ್ಯಮಗಳು ಬಿತ್ತರಿಸಿವೆ. ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಆರ್.ಅಶೋಕ್ ವ್ಯಂಗ್ಯವಾಗಿಯೇ ತಿವದಿದ್ದಾರೆ.

About The Author