Wednesday, September 17, 2025

Latest Posts

Political News: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಯೋಜನೆಗೆ ಚಾಲನೆಯೂ ದೊರೆಯದೇ ನೆನೆಗುದಿಗೆ ಬಿದ್ದಿತ್ತು: ಸಿಎಂ

- Advertisement -

Political News: ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ 3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

ನಮ್ಮ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ನಾವು ಕೈಗೊಂಡಿದ್ದೇವೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಗೆ ಏರಿಸಲು ಅನುಮತಿ ನೀಡಲಾಗಿದೆ. ಜಲಾಶಯದ ಎತ್ತರವನ್ನು ಹೆಚ್ಚಿಸುವುದರಿಂದ ಆಲಮಟ್ಟಿಯ ಹಿನ್ನೀರಿನಿಂದ ಸುಮಾರು 75,000 ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುವ ಸಂಭವವಿದೆ. ಇದರಿಂದ 5.94 ಲಕ್ಷ ಹೆಕ್ಟೇರ್(ಸುಮಾರು 14 ರಿಂದ 15 ಲಕ್ಷ ಎಕರೆ) ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ. ಯುಕೆಪಿ ಹಂತ 3 ಬೃಹತ್ ನೀರಾವರಿ ಯೋಜನೆಯಾಗಿದ್ದು, ಈ ಭಾಗದ ರೈತರ ಜಮೀನಿಗೆ ನೀರೊದಗಿಸಿ, ಅವರ ಜೀವನ ಮಟ್ಟದ ಸುಧಾರಿಸಲು ನಾವು ಪಣತೊಟ್ಟಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ರೈತರು, ರೈತ ಹೋರಾಟ ಸಂಘಗಳು, ಸಂಬಂಧಪಟ್ಟ ಶಾಸಕರು, ಸಚಿವರೊಂದಿಗೆ ಚರ್ಚೆ ನಡೆಸಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಯೋಜನೆಗೆ ರೈತರಿಂದ ಸ್ವಾಧೀನಪಡಿಸಿಕೊಳ್ಳುವ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 40 ಲಕ್ಷ ರೂ, ಖುಷ್ಕಿ ಒಣಭೂಮಿಯ ಎಕರೆಯೊಂದಕ್ಕೆ 30 ಲಕ್ಷ ಪರಿಹಾರವನ್ನು ನೀಡಬೇಕೆಂದು ಸಚಿವ ಸಂಪುಟ ತೀರ್ಮಾನಿಸಿದೆ.

ಕಾಲುವೆ ತೋಡಲು ಸುಮಾರು 51,837 ಎಕರೆ ಬೇಕಾಗಿದ್ದು, ಇದರಲ್ಲಿ 23,631 ಎಕರೆ ಭೂಮಿಯ ಸ್ವಾಧೀನ ಪ್ರಕ್ರಿಯೆ ನಡೆಸಿ, ಕಾಮಗಾರಿ ಕೈಗೊಳ್ಳಲಾಗಿದೆ. ಕಾಲುವೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಸಂಬಂಧಿಸಿದಂತೆ ಒಣಭೂಮಿಯ ಎಕರೆಯೊಂದಕ್ಕೆ 25 ಲಕ್ಷ ಹಾಗೂ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 30 ಲಕ್ಷ ಪರಿಹಾರ ಒದಗಿಸಲು ತೀರ್ಮಾನಿಸಲಾಗಿದೆ. ಕಾಲುವೆ ನಿರ್ಮಾಣದಲ್ಲಿ ಜಮೀನು ಕಳೆದುಕೊಂಡವರು ಯೋಜನೆಯ ಫಲಾನುಭವಿಗಳಾಗುತ್ತಾರೆ ಎಂದು ಸಿಎಂ ಹೇಳಿದ್ದಾರೆ.

ಭೂಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಪರಿಹಾರವನ್ನು ಮೂರು ಆರ್ಥಿಕ ವರ್ಷದೊಳಗೆ ನೀಡಲು ತೀರ್ಮಾನಿಸಲಾಗಿದೆ. ಯೋಜನೆಗೆ ಭೂಸ್ವಾಧೀನಪಡಿಸಿಕೊಳ್ಳಲು ರೈತರ ಮನವೊಲಿಸುವುದಾಗಿ ಸಂಬಂಧಪಟ್ಟ ಸಚಿವರು, ಶಾಸಕರು, ರೈತಮುಖಂಡರು ತಿಳಿಸಿದ್ದಾರೆ. ರಾಜ್ಯದ ಜನರಿಗೆ ಒಳಿತು ಮಾಡುವ ಈ ಸಾರ್ಥಕ ಯೋಜನೆಗೆ ಭೂಮಿ ನೀಡಲು ರೈತರು ಸಮ್ಮತಿಸಬಹುದೆಂಬ ಭರವಸೆಯಿದೆ. ಇದೊಂದು ಐತಿಹಾಸಿಕ ತೀರ್ಮಾನ. 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಹಾರದ ಮೊತ್ತ ಕಡಿಮೆಯಿದ್ದುದ್ದರಿಂದ ಯಾವ ರೈತರೂ ಭೂಮಿ ನೀಡಲು ಒಪ್ಪಲಿಲ್ಲ ಹಾಗೂ ಯೋಜನೆಗೆ ಚಾಲನೆಯೂ ದೊರೆಯದೇ ನೆನೆಗುದಿಗೆ ಬಿದ್ದಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಹಿಂದೆ ಬೆಳಗಾವಿಯಲ್ಲಿ ಉತ್ತರ ಕರ್ನಾಟಕದ ಶಾಸಕರು, ರೈತಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಒಂದೇ ಬಾರಿಗೆ ಕನ್ಸೆಂಟ್ ಅವಾರ್ಡ್ ನೀಡುವ ಬಗ್ಗೆ ಪರಿಗಣಿಸಿದ್ದರೂ, ಪರಿಹಾರಧನ ನಿಗದಿಯಾಗಿರಲಿಲ್ಲ. ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ. ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನೀಡುತ್ತದೆ. ಆದರೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇದುವರೆಗೂ ಅಧಿಸೂಚನೆ ಹೊರಡಿಸಿಲ್ಲ. ಯೋಜನೆಯ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಅಧಿಸೂಚನೆ ಹೊರಡಿಸಲು ಕೇಂದ್ರವನ್ನು ಹಲವು ಬಾರಿ ಭೇಟಿ ಮಾಡಿ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಲಾಗಿದೆ.

1,33,867 ಎಕರೆ ಜಮೀನು ಯೋಜನೆಗೆ ಬೇಕಾಗಿದ್ದು, 75,563 ಎಕರೆ ಮುಳುಗಡೆಯಾಗಲಿದೆ. 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆ ಕಾರ್ಯಗಳಿಗೆ 6,469 ಎಕರೆಗಳ ಅವಶ್ಯಕತೆಯಿದೆ. ಇದರಿಂದ ಸುಮಾರು 20 ಗ್ರಾಮಗಳು, ಕೆಲವು ಪಟ್ಟಣದ ವಾರ್ಡ್ ಗಳು ಮುಳುಗಡೆಯಾಗುತ್ತಿದ್ದು, ಒಟ್ಟು 1,33,867 ಎಕರೆಗೆ ಭೂಸ್ವಾಧೀನ ಪರಿಹಾರ ನೀಡುವ ಐತಿಹಾಸಿಕ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಉದ್ದೇಶಕ್ಕಾಗಿ ಪ್ರತಿವರ್ಷ ಸುಮಾರು 15 ರಿಂದ 20 ಸಾವಿರ ಕೋಟಿ ರೂ.ಗಳ ವೆಚ್ಚ ಬರಲಿದೆ. ಒಟ್ಟಾರೆ ಈ ಯೋಜನೆಗೆ ಸುಮಾರು 70 ಸಾವಿರ ಕೋಟಿ ರೂ. ಗಳು ವೆಚ್ಚವಾಗುವ ಅಂದಾಜು ಇದೆ ಎಂದು ಸಿಎಂ ಹೇಳಿದ್ದಾರೆ.

- Advertisement -

Latest Posts

Don't Miss