ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ತಕ್ಷಣ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಾರ್ನ್ ಮಾಡಿದ್ದಾರೆ.
ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಗರಾಭಿವೃದ್ಧಿ ಸಂಬಂಧಿತ ಸಚಿವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ, ಬೆಂಗಳೂರಿನ ರಸ್ತೆಗಳ ನೂಕುನುಗ್ಗಲು, ಟ್ರಾಫಿಕ್ ಸಮಸ್ಯೆ ಮತ್ತು ಗುಂಡಿಗಳ ಸ್ಥಿತಿಯನ್ನು ಶೀಘ್ರ ಸುಧಾರಿಸಲು ಶಾಶ್ವತ ಪರಿಹಾರವನ್ನ ಕಾರ್ಯರೂಪಕ್ಕೆ ತರಬೇಕೆಂದು ಸೂಚನೆ ನೀಡಲಾಯಿತು.
ಬೆಂಗಳೂರಿನ ರಸ್ತೆ ದುಸ್ಥಿತಿ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಕೆಲ ಐಟಿ-ಬಿಟಿ ಕಂಪನಿಗಳು ನಗರದಿಂದ ಬೇರ್ಪಡುವ ಮಾತುಗಳನ್ನು ವ್ಯಕ್ತಪಡಿಸಿರುವುದು ಸರ್ಕಾರಕ್ಕೆ ಎಚ್ಚರಿಕೆಯ ಘಂಟೆಯಾಗಿದೆ. ಉದ್ಯಮಿಗಳು, ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಪಕ್ಷದ ಸರ್ಕಾರದ ಬೆನ್ನುಹತ್ತಿರುವ ನಕಾರಾತ್ಮಕ ಅಭಿಪ್ರಾಯ ತಡೆಯಬೇಕೆಂದು ಸುರ್ಜೇವಾಲಾ ಸಲಹೆ ನೀಡಿದ್ದಾರೆ.
ರಾಜಧಾನಿ ರಸ್ತೆಗಳ ಅವ್ಯವಸ್ಥೆಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸಂಜೆ 6 ಗಂಟೆಗೆ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ ಕರೆದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್, ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, BSNL, BMRCL, BMWSSB, GBA ಹಾಗೂ ಸಂಚಾರ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ರಸ್ತೆ ಸುಧಾರಣೆ, ಟ್ರಾಫಿಕ್ ನಿರ್ವಹಣೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಶಾಶ್ವತ ಮಾರ್ಗಸೂಚಿಗಳನ್ನು ರೂಪಿಸಲು ನಿರ್ಧರಿಸಲಾಗಿದೆ.
ವರದಿ : ಲಾವಣ್ಯ ಅನಿಗೋಳ