ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ, ಸುಪ್ರೀಂಕೋರ್ಟ್ ಅಂಗಳ ತಲುಪಿದೆ. ಸಿಬಿಐ ತನಿಖೆ ವಾಪಸ್ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ, ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ರು. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಸಲಾಯ್ತು.
ಇದೇ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿತ್ತು. ಈಗ ಅವರ ಪೀಠಕ್ಕೆ ವಿಚಾರಣೆ ನಡೆಸುವಂತೆ ಅರ್ಜಿಗಳನ್ನು ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿತು. ಈ ವೇಳೆ ಡಿ.ಕೆ. ಶಿವಕುಮಾರ್ ಅವರ ಪರ ಹಿರಿಯ ವಕೀಲರಾದ ಅಭಿಷೇಕ್ ಎಂ. ಸಿಂಘ್ವಿ, ರಾಜಕೀಯ ವಿಷಯಗಳು ಕೋರ್ಟಿನ ಆಚೆಗೆ ಇತ್ಯರ್ಥಪಡಿಸಿಕೊಳ್ಳಬೇಕೆಂದು, ಸಿಜೆಐ ಈ ಹಿಂದೆ ಹೇಳಿದ್ದಾಗಿ ನ್ಯಾಯ ಪೀಠದ ಗಮನಕ್ಕೆ ತಂದಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ, 2019ರ ಸೆಪ್ಟೆಂಬರ್ 25ರಂದು ಸಿಬಿಐ ತನಿಖೆಗೆ ವಹಿಸಿತ್ತು. ಕೇಂದ್ರ ತನಿಖಾ ಸಂಸ್ಥೆಯು ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ಟೋಬರ್ 3, 2020ರಂದು ಪ್ರಕರಣ ದಾಖಲಿಸಿ ವಿಚಾರಣೆ ಶುರುಮಾಡಿದ್ರು.