ಕರ್ನಾಟಕದಾದ್ಯಂತ ಮುಂಗಾರು ಮಳೆ ಮತ್ತೆ ಚುರುಕಾಗಿದೆ. ಮುಂದಿನ ಒಂದು ವಾರ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಕಂಡುಬರುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಸೆಪ್ಟೆಂಬರ್ 27 ರಿಂದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಸಹ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಜೊತೆಗೆ ಮಲೆನಾಡಿನ ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಮೂರು ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ಬಂಗಾಳಕೊಲ್ಲಿಯ ಒಡಿಶಾ ಹಾಗೂ ಆಂಧ್ರ ಪ್ರದೇಶ ಕರಾವಳಿ ಭಾಗದಲ್ಲಿ ಚಂಡಮಾರುತದ ತೀವ್ರತೆ ಹೆಚ್ಚಿದೆ. ಇದರ ಪರಿಣಾಮವಾಗಿ ಕರ್ನಾಟಕದ ಮೇಲ್ಮೈ ಮೇಲೆಯೂ ಮಳೆ ಪರಿಣಾಮ ಬೀರುತ್ತಿದೆ. ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುವ ಸೂಚನೆಯೂ ಇದೆ. ಇದರ ಬೆನ್ನಲ್ಲೇ ಕರಾವಳಿ ಭಾಗದಲ್ಲಿ ಬಿರುಗಾಳಿಯ ವೇಗ ಹೆಚ್ಚಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಸೆಪ್ಟೆಂಬರ್ 26ರವರೆಗೆ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ. ಕೆಲವೊಂದು ಬಡಾವಣೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಮುಂಗಾರು ಋತು ಅಂತ್ಯದ ಹಂತದಲ್ಲಿರುವಾಗಲೂ ಮಳೆ ಚುರುಕಾಗಿರುವುದು ರಾಜ್ಯದ ಜನರಿಗೆ ಸವಾಲಾಗಬಹುದು. ಕೃಷಿಕರಿಂದ ಹಿಡಿದು ನಗರ ನಿವಾಸಿಗಳವರೆಗೂ ಎಲ್ಲರೂ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ವರದಿ : ಲಾವಣ್ಯ ಅನಿಗೋಳ