ದಸರಾ ಹಬ್ಬ ಮುಗಿಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸಿಎಂ ಬದಲಾವಣೆ ಆಗಲ್ಲ.. ಸಿಎಂ ಬದಲಾವಣೆ ಆಗಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರು ತಮ್ಮ ಮಾತು ಬದಲಿಸುತ್ತಿದ್ದಾರೆ. ನವೆಂಬರ್‌ನಲ್ಲಿ ಕ್ಯಾಬಿನೆಟ್ ರೀಶಫಲ್ ಅಲ್ಲ ಸಿಎಂ ಕುರ್ಚಿಯೇ ಎಕ್ಸ್‌ಚೇಂಜ್ ಆಗಲಿದೆ ಎನ್ನುತ್ತಿದ್ದಾರೆ.
ನವೆಂಬರ್ 20ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಎರಡೂವರೆ ವರ್ಷದ ಅಧಿಕಾರಾವಧಿ ಪೂರ್ಣಗೊಳಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಷ್ಟು ದಿನ ಸೈಲೆಂಟ್ ಆಗಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ನಾಯಕರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ಶಾಸಕರು, ಕಾಂಗ್ರೆಸ್ ಮುಖಂಡರು ಒಬ್ಬೊಬ್ಬರಾಗೇ ಡಿಕೆಶಿ ಸಿಎಂ ಆಗುವುದು ಖಚಿತ ಅನ್ನೋ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಡಿಕೆ ಶಿವಕುಮಾರ್ ಬಣದ ಈ ಮಾತು ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಅಲ್ಲೋಲ, ಕಲ್ಲೋಲವನ್ನೇ ಸೃಷ್ಟಿಸಿದೆ.
ಮೊದಲಿಗೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡರು ನಾಗಮಂಗಲದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವೆಂಬರ್‌ನಲ್ಲಿ ಮುಖ್ಯಮಂತ್ರಿ ಆಗೇ ಆಗುತ್ತಾರೆ. ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಅವರು ಸಿಎಂ ಆಗಲಿದ್ದಾರೆ. ಡಿ.ಕೆ ಶಿವಕುಮಾರ್ ಸಿಎಂ ಆಗಬೇಕೆಂದು ಹಳೇ ಮೈಸೂರು ಭಾಗದವರಾದ ನಮ್ಮೆಲ್ಲರ ಇಚ್ಛೆ. ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ. ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುತ್ತದೆ ಎಂದಿದ್ದಾರೆ.
ಇದೇ ಸಮಯಕ್ಕೆ ಸರಿಯಾಗಿ ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಅವರು ಕೂಡ ಡಿಕೆ ಶಿವಕುಮಾರ್ ಪರ ಅಖಾಡಕ್ಕಿಳಿದಿದ್ದಾರೆ. ಕಳೆದ ಚುನಾವಣೆಯಲ್ಲಿ 135 ಸ್ಥಾನ ಗೆದ್ದು ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಡಿ.ಕೆ. ಶಿವಕುಮಾರ್ ಅವರ ಶ್ರಮವಿದೆ. ಹೀಗಾಗಿ ಕಾರ್ಯಕರ್ತರು ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂದು ಅಪೇಕ್ಷೆ ಪಡುತ್ತಿದ್ದಾರೆ. ಡಿಕೆಗೆ ಸಿಎಂ ಸ್ಥಾನಮಾನ ಕೊಡುವ ಬಗ್ಗೆ ಹೈಕಮಾಂಡ್ ಚಿಂತನೆ ಮಾಡಬೇಕು.
ಹೈಕಮಾಂಡ್ ನಿರ್ಧಾರಕ್ಕಾಗಿ ಪಕ್ಷದ ಕಾರ್ಯಕರ್ತರು ಕಾಯುತ್ತಿದ್ದಾರೆ. ರಾಜಕೀಯ ಅನ್ನೋದು ಕೃಷಿ ಇದ್ದ ಹಾಗೆ. ಕೃಷಿಯಲ್ಲಿ ಶ್ರಮ ಹಾಕಿದಂತೆ ರಾಜಕೀಯದಲ್ಲಿ ಸಮಸ್ಯೆ ಬಗೆಹರಿಸಬೇಕು. ಡಿ.ಕೆ.ಶಿವಕುಮಾರ್ ಹಾರ್ಡ್ಶಿಪ್ ನಂಬಿ ಕೆಲಸ ಮಾಡುವವರಾಗಿದ್ದು, ಬೆಳಗ್ಗೆ 8 ಗಂಟೆಯಿಂದ ಮಧ್ಯರಾತ್ರಿವರೆಗೂ ದುಡಿಯುತ್ತಾರೆ. ಅವರಿಗೆ ಭಗವಂತನ ಆಶೀರ್ವಾದ ಇರುವುದರಿಂದ ಸಿಎಂ ಆಗ್ತಾರೆ. ಡಿ.ಕೆ.ಶಿವಕುಮಾರ್ ಒಂದಲ್ಲ ಒಂದು ದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ಡಾ.ರಂಗನಾಥ್ ಭವಿಷ್ಯ ನುಡಿದಿದ್ದಾರೆ.