ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಬುಧವಾರ ತಿಳಿಸಿದ್ದಾರೆ. 83 ವರ್ಷದ ಖರ್ಗೆ ಅವರು ಮಂಗಳವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಮೆಮೊರಿಯಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನಂತರ ವೈದ್ಯರ ಸಲಹೆಯಂತೆ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಡೆಸಲಾಯಿತು.
ಖರ್ಗೆ ಅವರ ಆರೋಗ್ಯ ಸ್ಥಿತಿಯ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ ಖಾತೆ ಮೂಲಕ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆಯ ಯಶಸ್ವಿಯಾಗಿದೆ.ಇದೊಂದು ಸಣ್ಣ ಶಸ್ತ್ರಚಿಕಿತ್ಸೆ, ಪೂರ್ಣಗೊಂಡಿದೆ. ಅವರು ಈಗ ಆರೋಗ್ಯವಾಗಿದ್ದಾರೆ. ಅಕ್ಟೋಬರ್ 3ರಿಂದ ತಮ್ಮ ನಿಯಮಿತ ಕಾರ್ಯಗಳಲ್ಲಿ ಪುನಃ ತೊಡಗಿಕೊಳ್ಳಲಿದ್ದಾರೆ. ಎಲ್ಲ ನಿಗದಿತ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲರ ಪ್ರೀತಿಗೆ, ಬೆಂಬಲಕ್ಕೆ ಹಾಗೂ ಕಾಳಜಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.
ನಂತರ ಮಾಧ್ಯಮಗಳಿಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ವಯೋಸಹಜ ಸಮಸ್ಯೆ ಹಾಗೂ ಕೆಲವೊಂದು ಉಸಿರಾಟದ ತೊಂದರೆಗಳಿಂದಾಗಿ ವೈದ್ಯರು ಪೇಸ್‌ಮೇಕರ್ ಅಳವಡಿಸಲು ಸಲಹೆ ನೀಡಿದ್ದರು. ಹೃದಯ ಬಡಿತದ ಸ್ಥಿರತೆಯ ದೃಷ್ಟಿಯಿಂದ ಇದು ಅಗತ್ಯವಾಗಿತ್ತು. ಇದನ್ನು ಹೊರತುಪಡಿಸಿ ಅವರಲ್ಲಿ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ.
ಎರಡು-ಮೂರು ದಿನ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಯಾರೂ ಗಾಬರಿಪಡುವ ಅಗತ್ಯವಿಲ್ಲ ಎಂದಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಅವರ ಆರೋಗ್ಯವನ್ನು ವಿಚಾರಿಸಿದರು.
ವರದಿ : ಲಾವಣ್ಯ ಅನಿಗೋಳ

