ಬೆಂಗಳೂರಿನ ನಮ್ಮ ಮೆಟ್ರೋ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಭಾಗಿಯಾಗಿದ್ರು.
ಆ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ರೆ, ಇವತ್ತೆ ಬಸವ ಮೆಟ್ರೋ ಎಂದು ಘೋಷಿಸಿ ಬಿಡುತ್ತಿದ್ದೆ ಅಂತಾ ಹೇಳಿದ್ರು.
ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಬಸವ ಜಯಂತಿ ದಿನವೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಾನು, ಅದೇ ದಿನ ಎಲ್ಲರಿಗೂ ಗ್ಯಾರಂಟಿ ಯೋಜನೆಗಳ ಮೂಲಕ, ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ.
ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ ನಂಬಿಕೆ, ಬದ್ಧತೆ ಇಟ್ಟುಕೊಂಡಿದ್ದೀನಿ. ಮುಂದೆ, ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದ್ದಾರೆ. ನಾನೂ ಇದನ್ನು ಪಾಲಿಸುತ್ತೇನೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.