ಮಲಯಾಳಂ ಕಲಿಕೆ ಕಡ್ಡಾಯ – ಕಾಸರಗೋಡು ಕನ್ನಡ ಮಕ್ಕಳಿಗೆ ಇನ್ನೂ ಸಂಕಷ್ಟ!?

ಕೇರಳ ವಿಧಾನಸಭೆ ಶುಕ್ರವಾರ ಮಹತ್ವದ ನಿರ್ಣಯ ಕೈಗೊಂಡಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಮಲಯಾಳಂ ಭಾಷೆಯ ಕಲಿಕೆಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ.

ಕಾನೂನು ಸಚಿವ ಪಿ. ರಾಜೀವ್ ಅವರು ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಪ್ರಕಾರ, ಕೇರಳದ ಬೇರೆ ರಾಜ್ಯಗಳಿಂದ ಬರುವ ಮತ್ತು 9 ಹಾಗೂ 10ನೇ ತರಗತಿಗೆ ಸೇರುವ ವಿದ್ಯಾರ್ಥಿಗಳಿಗೆ ಮಲಯಾಳಂ ಕಲಿಕೆ ಕಡ್ಡಾಯವಲ್ಲ ಎಂದು ತಿಳಿಸಲಾಗಿದೆ.

ಆದರೆ ಕಾಸರಗೋಡು ಜಿಲ್ಲೆಯ ಕನ್ನಡ ಭಾಷಾ ಅಲ್ಪಸಂಖ್ಯಾತರು ಮತ್ತು ಇಡುಕ್ಕಿ ಜಿಲ್ಲೆಯ ತಮಿಳು ಭಾಷಾ ಅಲ್ಪಸಂಖ್ಯಾತರ ಸಮಸ್ಯೆಗಳ ಬಗ್ಗೆ ಈ ವಿಧೇಯಕದಲ್ಲಿ ಯಾವುದೇ ಸ್ಪಷ್ಟ ಉಲ್ಲೇಖವಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಕನ್ನಡಪರ ಸಂಘಟನೆಗಳ ನಾಯಕರು ತಿಳಿಸಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿಯೇ ಸುಮಾರು 200 ಕನ್ನಡ ಮಾಧ್ಯಮ ಶಾಲೆಗಳಿದ್ದು, ಇದರಲ್ಲಿ 80 ಪ್ರೌಢಶಾಲೆಗಳಿವೆ. ಕಳೆದ ಕೆಲ ವರ್ಷಗಳಿಂದ ಈ ಭಾಗದಲ್ಲಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ಇದರಿಂದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅನಗತ್ಯ ಒತ್ತಡವನ್ನು ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಕಾಸರಗೋಡು ಭಾಗದ ಕನ್ನಡ ಭಾಷಾ ಅಲ್ಪಸಂಖ್ಯಾತರ ಬಗೆಗಿನ ವಿಶೇಷ ವಿಚಾರಣೆ ಇಲ್ಲದ ಈ ವಿಧೇಯಕ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ರಾಜಕೀಯ ಮತ್ತು ಸಾಮಾಜಿಕ ಹೋರಾಟಗಳು ಮತ್ತಷ್ಟು ಗಟ್ಟಿಗೊಳ್ಳುವ ಸಾಧ್ಯತೆ ಇದೆ.

ವರದಿ : ಲಾವಣ್ಯ ಅನಿಗೋಳ

About The Author