ಕಲಿಯುಗದ ಕುಡುಕ ಎಂಬ ನಾಟಕದ ಮೂಲಕವೇ ಜನಪ್ರಿಯತೆ ಗಳಿಸಿದ್ದ ರಾಜು ತಾಳಿಕೋಟಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ 2024 ರ ಆಗಸ್ಟ್ 12 ರಂದು ರಾಜ್ಯ ಸರ್ಕಾರ ತಾಳಿಕೋಟಿ ಅವರನ್ನು ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ನೇಮಿಸಿತ್ತು.
ರಂಗಭೂಮಿ ಕಲಾವಿದರಾಗಿದ್ದ ತಾಳಿಕೋಟಿ ಸಾಕಷ್ಟು ನಾಟಕ ಹಾಗೂ ಸಿನಿಮಾಗಳಲ್ಲಿ ಪಾತ್ರ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದರು. ರಂಗಭೂಮಿಯಲ್ಲಿ ಅವರಿಗಿದ್ದ ಅಪಾರ ಅನುಭವದ ಹಿನ್ನೆಲೆಯಲ್ಲೇ ರಾಜ್ಯ ಸರ್ಕಾರ ಅವರನ್ನು ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ನೇಮಿಸಿತ್ತು.
14 ತಿಂಗಳ ಕಾಲ ನಿರ್ದೇಶಕರಾಗಿದ್ದ ಅವರು ರಂಗಾಯಣದಲ್ಲಿ ಅನೇಕ ರಂಗ ಚಟುವಟಿಕೆಗಳನ್ನು ಮಾಡಿದ್ದರು. ಹೃದಯಾಘಾತವಾದ ಹಿನ್ನೆಲೆ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಸೋಮವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದರು. ಅವರ ಜೀವನದ ಬಹುಪಾಲು ಸಮಯವನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನು ರಂಜಿಸುವುದರಲ್ಲಿಯೇ ಕಳೆದಿದ್ದರು.
ರಂಗಭೂಮಿಯಲ್ಲಿ ಅಪಾರ ಅನುಭವ ಪಡೆದ ನಂತರ ಅವರು ಕನ್ನಡ ಚಲನಚಿತ್ರ ರಂಗಕ್ಕೆ ಪ್ರವೇಶಿಸಿದರು. ಪ್ರಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.
ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದು, ಉತ್ತರ ಕರ್ನಾಟಕದ ಕಲಾರಂಗಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ. ಅವರ ಅಂತಿಮ ವಿಧಿವಿಧಾನಗಳು ತಾಳಿಕೋಟಿ ನಗರದಲ್ಲಿ ನಡೆಯಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವರದಿ : ಲಾವಣ್ಯ ಅನಿಗೋಳ