Friday, October 17, 2025

Latest Posts

ಕರ್ನಾಟಕದಲ್ಲಿ ಮತ್ತೆ ಮಳೆ ಭೀತಿ, 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

- Advertisement -

ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 24 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಅಕ್ಟೋಬರ್ 17ರಿಂದ 19ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸೂಚನೆ ನೀಡಲಾಗಿದೆ.

ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ ವಿವಿಧೆಡೆ 17 ರಂದು ಮಳೆಯಾಗಲಿದ್ದು, 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದ ಪರಿಸ್ಥಿತಿ ಅಶಾಂತವಾಗಿರುವುದರಿಂದ ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕೆಂದು ಇಲಾಖೆಯು ಸೂಚಿಸಿದೆ.

ಹಳೇ ಮೈಸೂರು ಭಾಗದ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಧ್ಯ ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಬೆಳಗಾವಿ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ ಭಾಗಗಳಲ್ಲಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ.

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಯ ಕೆಲ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಒಣ ಹವಾಮಾನ ಇರಲಿದೆ. ರಾಜಧಾನಿ ಬೆಂಗಳೂರು ನಗರದಲ್ಲೂ ಅಕ್ಟೊಬರ್ 17 ರಂದು ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಹವಾಮಾನ ಇಲಾಖೆ ಪ್ರಕಾರ, ಮಳೆಯ ಪ್ರಮಾಣ ಶೇ.80 ರಿಂದ 100 ರಷ್ಟು ಇರಬಹುದೆಂದು ಅಂದಾಜಿಸಲಾಗಿದೆ. ಗಾಳಿಯ ವೇಗ ಗಂಟೆಗೆ 14 ರಿಂದ 20 ಕಿ.ಮೀ ಇರಲಿದೆ. ನಗರದ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20-21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಜನತೆ ತಂಪಾದ ವಾತಾವರಣಕ್ಕೆ ಸಿದ್ಧರಾಗಿರಬೇಕಾಗಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss