ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ವಾಯು ಚಂಡಮಾರುತದ ಪರಿಣಾಮದಿಂದ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದ್ದು, ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದಾರೆ. ಅಕ್ಟೋಬರ್ 23 ರಿಂದ 25ರವರೆಗೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ 115.6 ಮಿಮೀ.ರಿಂದ 204.4 ಮಿಮೀ.ವರೆಗಿನ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಹೊರಡುವುದನ್ನು ತಾತ್ಕಾಲಿಕವಾಗಿ ತಡೆಯಲು ಸೂಚಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 24 ಮತ್ತು 25ರಂದು ಯೆಲ್ಲೋ ಅಲರ್ಟ್ ಜಾರಿಯಾಗಿದೆ. ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರೈತರಿಗೆ ಹಾಗು ಕೊಡಗು ಮತ್ತು ಚಿಕ್ಕಮಗಳೂರಿನ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಅಪಾಯವಿದ್ದು, ಸಾರ್ವಜನಿಕರು ಹೆಚ್ಚಿನ ಜಾಗೃತಿ ತಾಳಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.
ವರದಿ : ಲಾವಣ್ಯ ಅನಿಗೋಳ