Monday, October 27, 2025

Latest Posts

ಸಂಪುಟ ಪುನಾರಚನೆ ಆದ್ರೆ ಸಿದ್ದರಾಮಯ್ಯ ಸ್ಥಾನ ಉಳಿಯುತ್ತಾ?

- Advertisement -

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. ನಡುವೆ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ನಾಯಕತ್ವ ಕುರಿತು ಸ್ಪಷ್ಟನೆ ನೀಡಿದ್ದು ಹೊಸ ಚರ್ಚೆಗೆ ಗ್ರಾಸವಾಗಿದೆ.

ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಅನುಮತಿ ನೀಡಿದರೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುತ್ತಾರೆ. ಸಂಪುಟ ಪುನಾರಚನೆ ನಡೆದರೂ ಸಿಎಂ ಬದಲಾವಣೆ ಆಗುವುದಿಲ್ಲ. ಆದರೆ, ಅನುಮತಿ ಸಿಗದಿದ್ದರೆ ರಾಜಕೀಯ ಚಟುವಟಿಕೆಗಳು ವೇಗ ಪಡೆಯಬಹುದು ಎಂದು ಹೇಳಿದರು.

ನಾನು ಸಿಎಂ ಬದಲಾವಣೆ ಆಗುವುದಿಲ್ಲ ಎಂಬ ವಿಶ್ವಾಸದಲ್ಲಿ ಇದ್ದೇನೆ. ಯಾವುದೇ ಬದಲಾವಣೆ ಮಾಡುವ ವಿಚಾರ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನವಾಗುತ್ತದೆ. ಹೈಕಮಾಂಡ್ ಏನು ನಿರ್ಧರಿಸತ್ತೋ ಅದೇ ಅಂತಿಮವಾಗುತ್ತದೆ ಎಂದು ಹೇಳಿದರು.

ಅದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪದೇಪದೇ ದೆಹಲಿ ಭೇಟಿಗಳ ಬಗ್ಗೆ ಮಾತನಾಡಿದ ಅವರು, ದೆಹಲಿಗೆ ಅವರ ಭೇಟಿಯು ಕೋರ್ಟ್ ವಿಚಾರಣೆಗಳು ಹಾಗೂ ಪಕ್ಷದ ಇತರ ಚಟುವಟಿಕೆಗಳಿಗೆ ಸಂಬಂಧಪಟ್ಟದ್ದು. ಅದರಲ್ಲಿ ವಿಶೇಷ ಅರ್ಥ ಹುಡುಕುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಆರ್‌ಎಸ್‌ಎಸ್ ಪಥಸಂಚಲನ ಕುರಿತು ಪ್ರತಿಕ್ರಿಯಿಸಿದ ಅವರು, ಹೈಕೋರ್ಟ್ ಸೂಚನೆಯಂತೆ ನಾಳೆ ಚಿತ್ತಾಪುರದಲ್ಲಿ ಶಾಂತಿ ಸಭೆ ನಡೆಯಲಿದೆ. ಸಭೆಯ ವರದಿ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ. ಬಳಿಕ ನ್ಯಾಯಾಲಯ ತೀರ್ಮಾನ ಕೈಗೊಳ್ಳುತ್ತದೆ. ಈ ಪ್ರಕ್ರಿಯೆಯಲ್ಲಿ ಯಾರಿಗೂ ಹಸ್ತಕ್ಷೇಪದ ಅವಕಾಶವಿಲ್ಲ ಎಂದು ತಿಳಿಸಿದರು.

ದಲಿತ ಸಿಎಂ ಆಗಬೇಕು ಎಂಬ ಕೂಗು ತಪ್ಪೇನಲ್ಲ. ಆದರೆ, ಯಾರು ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು. ಇದಕ್ಕೂ ಮುನ್ನ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಬಿಹಾರ ಚುನಾವಣೆಯ ಬಳಿಕ ಹೈಕಮಾಂಡ್ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದರು. ಇದರಿಂದ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss