Wednesday, October 29, 2025

Latest Posts

ಜಲಪ್ರಳಯದ ಮಾರುತ ಗಂಟೆಗೆ 110 ಕಿ.ಮೀ ವೇಗ!

- Advertisement -

ಮೊಂಥಾ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ರಾಜ್ಯಾದ್ಯಂತ ತೀವ್ರ ಆತಂಕ ಸೃಷ್ಟಿಯಾಗಿದೆ. ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಚಂಡಮಾರುತ ಅಪ್ಪಳಿಸಲಿದೆ ಎಂದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತವು ಕಾಕಿನಾಡ ಬಳಿ, ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕರಾವಳಿಯನ್ನು ದಾಟುವ ನಿರೀಕ್ಷೆ ಇದೆ. ಗಂಟೆಗೆ 90ರಿಂದ 100 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದ್ದು, ಕೆಲವೊಮ್ಮೆ 110 ಕಿಲೋ ಮೀಟರ್‌ ವೇಗವನ್ನು ತಲುಪುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ಆಂಧ್ರಪ್ರದೇಶ ಸರ್ಕಾರವು ಪೂರ್ವ ಮತ್ತು ಪಶ್ಚಿಮ ಗೋದಾವರಿ, ಕೋನಸೀಮಾ ಮತ್ತು ವಿಶಾಖಪಟ್ಟಣ ಜಿಲ್ಲೆಗಳ ತಗ್ಗು ಪ್ರದೇಶಗಳು ಹಾಗೂ ಅಪಾಯಕಾರಿ ವಲಯಗಳಲ್ಲಿರುವ ಜನರನ್ನು ಸ್ಥಳಾಂತರಿಸುವ ಕಾರ್ಯವನ್ನು ಆರಂಭಿಸಿದೆ. ವಿದ್ಯುತ್ ಮತ್ತು ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಮತ್ತು ತುರ್ತು ಆಶ್ರಯ ತಾಣಗಳು ಹಾಗೂ ವೈದ್ಯಕೀಯ ಘಟಕಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲು, ಅಧಿಕಾರಿಗಳಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸೂಚಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಚಂಡಮಾರುತ ಹೋಗುವವರೆಗೂ ಜನರು ಎಲ್ಲೆಲ್ಲಿ ಇದ್ದಾರೋ, ಅಲ್ಲಿಯೇ ಸುರಕ್ಷಿತವಾಗಿರಲು ಮತ್ತು ಕರಾವಳಿ ಪ್ರದೇಶಗಳಿಗೆ ತೆರಳದಂತೆ ಹಾಗೂ ಸುರಕ್ಷತಾ ಸಲಹೆಗಳನ್ನು ಪಾಲಿಸುವಂತೆ ಸರ್ಕಾರ ಮನವಿ ಮಾಡಿದೆ.

ಇನ್ನು, ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ರಾಜ್ಯಕ್ಕೆ ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

- Advertisement -

Latest Posts

Don't Miss