ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ವಿರೋಧ ಪಕ್ಷದ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ, ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಹಣಕಾಸು ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ. ಹಾಗೂ ವಿರೋಧ ಪಕ್ಷದ ಶಾಸಕರಿಗೆ 25 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಜಮಖಂಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ಶಿವಯ್ಯ ಗುಡಗುಂಟಿ ಅರ್ಜಿ ಸಲ್ಲಿಸಿದ್ರು.
ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ, ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನ ಮುಂದೂಡಿದೆ. ಮತ್ತು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ, 2026ರ ಜನವರಿ 31ಕ್ಕೆ ವಿಚಾರಣೆ ಮುಂದೂಡಿದೆ.
ಅನುದಾನ ಹಂಚಿಕೆಯಲ್ಲಿ ಆಡಳಿತ ಪಕ್ಷದ ಶಾಸಕರು ಹಾಗೂ ವಿರೋಧ ಪಕ್ಷದ ಶಾಸಕರಿಗೆ ತಾರತಮ್ಯ ಮಾಡುತ್ತಿದೆ ಎಂದು ಆರೋಪ ಮಾಡಲಾಗಿತ್ತು. ಸರ್ಕಾರದ ಈ ಧೋರಣೆಯು ಸಂವಿಧಾನದ 14ನೇ ವಿಧಿಯಡಿ ಖಾತ್ರಿಪಡಿಸಲಾದ ಮೂಲಭೂತ ಹಕ್ಕುಗಳು ಹಾಗೂ 38 ಮತ್ತು 39ನೇ ವಿಧಿ ಅಡಿಯಲ್ಲಿನ, ರಾಜ್ಯ ನೀತಿ ನಿರ್ದೇಶಕ ತತ್ವಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ಇತರ ವಿಧಾನಸಭೆ ಕ್ಷೇತ್ರಗಳಂತೆ, ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೂ 50 ಕೋಟಿ ರೂ. ಅನುದಾನ ಮಂಜೂರು ಮಾಡಲು ಪ್ರತಿಧಿವಾದಿಗಳಿಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ, ಬಿಜೆಪಿ ಶಾಸಕರು ಕೋರಿದ್ದಾರೆ.

