ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ 55 ವರ್ಷದ ಮಂಜೇಗೌಡ ಅವರು, ಸೋಮವಾರ ಬೆಳಿಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ ಮೃತಪಟ್ಟರು.
ಈ ಘಟನೆ ನಂತರ, ರಾಜ್ಯ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರು ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನ ಪಾರ್ಥಿವ ದೇಹವನ್ನು ವಿಕ್ಷಿಸಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮೃತ ರೈತನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವರು ಘೋಷಿಸಿದರು. ಜೊತೆಗೆ, ಹೆಚ್ಚುವರಿ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಅದೇ ರೀತಿ, ರೈತನ ಆತ್ಮಹತ್ಯೆಗೆ ಕಾರಣವಾದ ಜಮೀನು ವ್ಯಾಜ್ಯ ಕುರಿತು ಕೂಡ ಸಚಿವರು ಪ್ರತಿಕ್ರಿಯಿಸಿದ್ದು, ಆ ಜಾಗದ ಕುರಿತು ಜಂಟಿ ಸರ್ವೆ ನಡೆಸಿ, ಅದು ಅರಣ್ಯ ಇಲಾಖೆಗೆ ಸೇರದಿದ್ದರೆ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು. ಈ ವೇಳೆ ಜಿಲ್ಲಾಧಿಕಾರಿ ಡಾ. ಕುಮಾರ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

