ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳಲ್ಲಿ ಮತ್ತೆ ಹುಲಿ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಗಂಭೀರ ನಿರ್ಧಾರ ಕೈಗೊಂಡಿದೆ. ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಹಾಗೂ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಲು ಆದೇಶಿಸಿದ್ದಾರೆ.
ಇತ್ತೀಚೆಗಷ್ಟೇ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆ ಹೆಗ್ಗೋಡಿಲು ಗ್ರಾಮದಲ್ಲಿ ಹುಲಿ ದಾಳಿಗೆ ಒಳಗಾಗಿ ಚೌಡಯ್ಯ ನಾಯ್ಕ ಸಾವನ್ನಪ್ಪಿದ ಘಟನೆ, ಅರಣ್ಯ ಇಲಾಖೆಯನ್ನು ಎಚ್ಚರಕ್ಕೆ ತಂದಿದೆ. ಕಳೆದ ಒಂದು ತಿಂಗಳಲ್ಲಿ ಹುಲಿ ದಾಳಿಯಿಂದ ಮೂವರು ಸಾವನ್ನಪ್ಪಿರುವುದು ತೀವ್ರ ಆಘಾತ ಮೂಡಿಸಿದೆ ಎಂದು ಸಚಿವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ, ಸಫಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು, ಚಾಲಕರು ಹಾಗೂ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಸೂಚನೆ ನೀಡಲಾಗಿದೆ. ವನ್ಯಜೀವಿ ವಿಭಾಗದ ಉನ್ನತ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ, ನಿರಂತರವಾಗಿ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ತುರ್ತು ಕ್ರಮ ಕೈಗೊಳ್ಳಬೇಕು ಎಂಬ ಸ್ಪಷ್ಟ ನಿರ್ದೇಶನವನ್ನು ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

