ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್ ನಂಬರ್ 1ರ ಬಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತ ಬೆನ್ನಲ್ಲೇ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಕೇಂದ್ರ ತನಿಖಾ ಸಂಸ್ಥೆಗಳು ದೌಡಾಯಿಸಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿವೆ. ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದು, ಸ್ಫೋಟದ ಬಗ್ಗೆ ವಿವರಿಸಿದ್ದಾರೆ.
ಈಗಾಗಲೇ ದೆಹಲಿ ನಗರ ಪೊಲೀಸ್ ಆಯುಕ್ತರ ಜೊತೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆ ನಡೆಸಿದ್ದಾರೆ. ಸ್ಫೋಟದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ್ದಾರೆದೆ. ಅಲ್ಲದೇ ದುರಂತದ ಬಗ್ಗೆ ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ, ಅಧಿಕಾರಿಗಳಿಗೆ ಶಾ ಸೂಚನೆ ನೀಡಿದ್ದಾರೆ.
ಇನ್ನು ಘಟನೆ ಬಗ್ಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದು, ಸಂಜೆ 7 ಗಂಟೆ ಸುಮಾರಿಗೆ ದೆಹಲಿಯ ಕೆಂಪು ಕೋಟೆ ಬಳಿಯ, ಸುಭಾಷ್ ಮಾರ್ಗದ ಟ್ರಾಫಿಕ್ ಸಿಗ್ನಲ್ನಲ್ಲಿ ಹುಂಡೈ ಐ20 ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಕೆಲವು ಪಾದಚಾರಿಗಳು ಗಾಯಗೊಂಡಿದ್ದಾರೆ. ಕೆಲ ವಾಹನಗಳು ಹಾನಿಗೊಳಗಾಗಿವೆ. ಪ್ರಾಥಮಿಕ ವರದಿಗಳ ಪ್ರಕಾರ, ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿವರಿಸಿದ್ದಾರೆ. ಸ್ಫೋಟದ ಮಾಹಿತಿ ಬಂದ ಹತ್ತೇ ನಿಮಿಷಗಳಲ್ಲಿ ದೆಹಲಿ ಕ್ರೈಂ ಬ್ರ್ಯಾಂಚ್ ಮತ್ತು ದೆಹಲಿ ಸ್ಪೆಷಲ್ ಸೆಲ್ನ ತಂಡಗಳು ಸ್ಥಳಕ್ಕೆ ಭೇಟಿ ನೀಡಿವೆ. ವಿಧಿವಿಜ್ಞಾನ ಪ್ರಯೋಗಾಲಯ ತಂಡದೊಂದಿಗೆ ಎನ್ಎಸ್ಜಿ ಮತ್ತು ಎನ್ಐಎ ತಂಡಗಳೂ ಸ್ಥಳಕ್ಕೆ ಆಗಮಿಸಿದ್ದು, ಎಲ್ಲಾ ಆಯಾಮಗಳಲ್ಲೂ ತನಿಖೆ ಪ್ರಾರಂಭಿಸಿವೆ ಎಂದು ಮಾಹಿತಿ ನೀಡಿದ್ದಾರೆ.
ಸುತ್ತಮುತ್ತ ಪ್ರದೇಶಗಳಲ್ಲಿರುವ ಎಲ್ಲಾ ಸಿಸಿಟಿವಿ ಕ್ಯಾಮೆರಾಗಳನ್ನ ಪರಿಶೀಲಿಸಲು ಆದೇಶಿಸಲಾಗಿದೆ. ಅಲ್ಲದೇ ನಾನು ದೆಹಲಿ ನಗರ ಪೊಲೀಸ್ ಮತ್ತು ವಿಶೇಷ ಸೆಲ್ ಮುಖ್ಯಸ್ಥರೊಂದಿಗೆ ಮಾತನಾಡಿದ್ದೇನೆ. ದೆಹಲಿ ಸಿಪಿ ಮತ್ತು ವಿಶೇಷ ಶಾಖೆಯ ಉಸ್ತುವಾರಿ ಸ್ಥಳದಲ್ಲಿದ್ದಾರೆ. ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಸಂಪೂರ್ಣ ತನಿಖೆ ನಡೆಸುತ್ತೇವೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಿ ಸಾರ್ವಜನಿಕರ ಮುಂದಿಡುತ್ತೇವೆ ಎಂದು ಶಪಥ ಮಾಡಿದ್ದಾರೆ.
ಇನ್ನು, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಡೆದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದು, ಅವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಸ್ಥಿತಿ ಅವಲೋಕಿಸಿದ್ದೇನೆ ಎಂದು ತಿಳಿಸಿದ್ದಾರೆ.

