Thursday, November 13, 2025

Latest Posts

ಋತುಚಕ್ರ ರಜೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

- Advertisement -

ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ, ಮಾಸಿಕ 1 ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕೆಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಹಿಳಾ ಕಾರ್ಮಿಕರಿಗೂ, ಈ ಆದೇಶ ಅನ್ವಯವಾಗಲಿದೆ.

ಎಲ್ಲಾ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52ರ ವಯೋಮಾನದ ಎಲ್ಲಾ ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ಮಹಿಳಾ ನೌಕರರಿಗೆ ಈ ಸೌಲಭ್ಯ ನೀಡಬೇಕೆಂದು ಎಲ್ಲ ಉದ್ಯೋಗದಾತರಿಗೂ ಸೂಚಿಸಿದೆ.
ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್‌ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳಿಗೂ ಅನ್ವಯವಾಗಲಿದೆ.

ಈ ಸಂಬಂಧ ರಾಜ್ಯ ಸರ್ಕಾರ 2024ರ ಜನವರಿ 12ರಂದು ಅಧಿಸೂಚನೆ ಹೊರಡಿಸಿತ್ತು. ಕಾರ್ಮಿಕ ಇಲಾಖೆ ಆಯುಕ್ತರು 2025ರ ಫೆಬ್ರವರಿ 21ರಂದು ಪತ್ರ ಬರೆದಿದ್ದರು. ಬಳಿಕ 2025ರ ಅಕ್ಟೋಬರ್‌ 9ರಂದು, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.

ಕಾರ್ಮಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌. ಸುಮ, ಇಂದು ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರತಿಯಲ್ಲಿ ಋತು ಚಕ್ರ ರಜೆಗೆ ಸಂಬಂಧಿಸಿದಂತೆ 3 ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿದೆ.

ನಂಬರ್‌ 1 : ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ.

ನಂಬರ್‌ 2 : ಪ್ರತಿ ತಿಂಗಳು 1 ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ

ನಂಬರ್‌ 3: 52 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಈ ರಜೆಯ ಸೌಲಭ್ಯ ಇಲ್ಲ ಎಂದು ಉಲ್ಲೇಖಿಸಲಾಗಿದೆ.

- Advertisement -

Latest Posts

Don't Miss