Thursday, November 13, 2025

Latest Posts

ಚಳಿಗಾಲ ಅಧಿವೇಶನಕ್ಕೆ ‘ಬೆಳಗಾವಿ’ ಸಜ್ಜು , ಜಿಲ್ಲಾಡಳಿತದಿಂದ ಸಂಪೂರ್ಣ ಸಿದ್ಧತೆ!

- Advertisement -

ಮುಂಬರುವ ಡಿಸೆಂಬರ್‌ನಲ್ಲಿ ಚಳಿಗಾಲ ಅಧಿವೇಶನ ಆರಂಭಗೊಳ್ಳಲಿದೆ. ಈ ಹಿನ್ನೆಲೆ, ಎಲ್ಲಾ ಇಲಾಖೆಗಳ ಸಮನ್ವಯ ಮತ್ತು ದೋಷರಹಿತ ವ್ಯವಸ್ಥೆಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಳೆದ ಬಾರಿಯಂತೆ ಈ ಬಾರಿಯೂ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಉಪಸಮಿತಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಯಾವುದೇ ಲೋಪಗಳು ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಧಿವೇಶನಕ್ಕೆ ಆಗಮಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಪಾಸ್‌ಗಳನ್ನು ಭದ್ರತಾ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ವಿತರಿಸಬೇಕು. ಸುವರ್ಣ ವಿಧಾನಸೌಧದ ನೆಲಮಹಡಿಯಲ್ಲಿ ಅಧಿಕಾರಿ, ಸಿಬ್ಬಂದಿ ಹಾಗೂ ಮಾರ್ಷಲ್‌ಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಬೇಕು. ಸೌಧದ ಹೊರಭಾಗದಲ್ಲಿ ಪಾವತಿಸಬೇಕಾದ ಕ್ಯಾಂಟೀನ್ ಸ್ಥಾಪನೆಗೂ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಅಧಿವೇಶನ ಸಮಯದಲ್ಲಿ ನಡೆಯಬಹುದಾದ ಪ್ರತಿಭಟನೆಗಳಿಗೆ ಸುವರ್ಣ ವಿಧಾನಸೌಧದ ಬಳಿ ಸೂಕ್ತ ಸ್ಥಳವನ್ನು ಗುರುತಿಸಿ, ಅಲ್ಲ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು. ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ತಂಗುವ ಸ್ಥಳಗಳಲ್ಲಿ ವೈದ್ಯರ ತಂಡ ಮತ್ತು ಆಂಬುಲೆನ್ಸ್ ನಿಯೋಜನೆ ಮಾಡಬೇಕು. ಅದೇ ರೀತಿ ಸುವರ್ಣ ವಿಧಾನಸೌಧ ಆವರಣದಲ್ಲೂ ವೈದ್ಯಕೀಯ ಸಿಬ್ಬಂದಿ ಹಾಗೂ ಆಂಬುಲೆನ್ಸ್ ಸಿದ್ಧವಾಗಿರಬೇಕು.

ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ, ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಖಚಿತಪಡಿಸಿಕೊಳ್ಳಬೇಕು. ವಾಹನಗಳ ಸ್ಥಿತಿ ಸುಸ್ಥಿತಿಯಲ್ಲಿರುವುದನ್ನು ಪೂರ್ವಪರಿಶೀಲನೆ ಮಾಡಬೇಕೆಂದು ಸೂಚಿಸಿದರು. ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಯಾವುದೇ ಅಡಚಣೆಗಳಿಲ್ಲದೆ, ಭದ್ರತೆ, ವೈದ್ಯಕೀಯ, ಸಾರಿಗೆ ಹಾಗೂ ತಾಂತ್ರಿಕ ವ್ಯವಸ್ಥೆಗಳಲ್ಲಿ ಪೂರ್ಣ ಸಿದ್ಧತೆಗೈಯಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss