ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಹವಾಮಾನದಲ್ಲಿ ಮುಂದಿನ ಒಂದು ವಾರ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿಯ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತ 7.6 ಕಿ.ಮೀ. ಎತ್ತರದವರೆಗೆ ಮೇಲ್ಮೈ ಸುಳಿಗಾಳಿ ರೂಪದಲ್ಲಿ ಮುಂದುವರಿದಿದೆ. ಇದು ಮುಂದಿನ 24 ಗಂಟೆಗಳಲ್ಲಿ ನಿಧಾನವಾಗಿ ಪಶ್ಚಿಮ–ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ರಾಜ್ಯದ ವಾತಾವರಣದಲ್ಲಿ ತಕ್ಷಣದ ಬದಲಾವಣೆಗಳು ಕಾಣಿಸಿಕೊಂಡಿವೆ. ಮುಂದಿನ 7 ದಿನಗಳ ಹವಾಮಾನ ಮುನ್ಸೂಚನೆ ನೀಡಲಾಗಿದೆ.
ನವೆಂಬರ್ 17 ರಂದು ಕೋಲಾರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆ ಸಾಧ್ಯತೆ ಇದೆ. ನವೆಂಬರ್ 18–19 ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ನವೆಂಬರ್ 20–21 ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಷ್ಟೇ ಹಗುರ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 22–23 ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಬಳ್ಳಾರಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇದರ ಹೊರತಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಇರಲಿದೆ.
ಮುಂದಿನ ಎರಡು ದಿನಗಳ ಕಾಲ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿಯ ಅಲೆ ಪರಿಸ್ಥಿತಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜನರು ಬೆಳಿಗ್ಗೆ–ರಾತ್ರಿ ತಾಪಮಾನ ಇಳಿಕೆಗೆ ಸಂಬಂಧಿಸಿದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ವರದಿ : ಲಾವಣ್ಯ ಅನಿಗೋಳ

