ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದಾರೆ. ಹಾಗಾದರೆ ಈ ಮಾತುಕತೆಯ ಅಸಲಿ ಉದ್ದೇಶ ಏನು ಎಂಬ ಕತೂಹಲಗಳು ಇದೀಗ ಉಂಟಾಗಿವೆ. ಡಿಕೆಶಿ ಜತೆಗೆ ಏನೇನು ಮಾತುಕತೆ ನಡೆಯಿತು ಎಂಬ ಬಗ್ಗೆ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಬಹುಶಃ ಕೊನೆಯವನು ನಾನೇ ಇರಬೇಕು ಎಂದಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೂ ಸಿಎಂ ಆಗುವ ಆಸೆ ಇರುತ್ತದೆ. ಸಿದ್ದರಾಮಯ್ಯ ಸಿಎಂ ಎಂದು ಹೈಕಮಾಂಡ್ ತೀರ್ಮಾನಿಸಿದೆ. ಈಗಲೂ, ಗೊಂದಲದ ಸಮಯದಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿ ಸಮಯ ಕೇಳುತ್ತೇನೆ. ಸಮಯ ಸಿಕ್ಕರೆ ನನ್ನ ಅಭಿಪ್ರಾಯ ಹೇಳುತ್ತೇನೆ. ಬದಲಾವಣೆ ಪರ್ವ ಏನಿಲ್ಲ. ಸಹಜವಾಗಿ ಡಿಕೆಶಿ ನನ್ನ ಭೇಟಿ ಮಾಡಿದ್ದಾರೆ. ಕೆಲವರನ್ನು ಮನೆಗೆ ಕರೆಸಿ ಭೇಟಿ ಆಗಿದ್ದಾರೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಭೇಟಿಯಾಗಿರುವ ಅಸಲಿ ಉದ್ದೇಶ ಏನು? ಅನ್ನೋದನ್ನ ನೋಡೊದದಾದ್ರೆ ಕೆ. ಜೆ. ಜಾರ್ಜ್ ಅವರು ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಒಬ್ಬರು. ಎಂದಿಗೂ ಸಿದರಾಮಯ್ಯ ಅವರನ್ನು ಬಿಟ್ಟು ಕೊಟ್ಟವರಲ್ಲ. ಸಿದ್ದರಾಮಯ್ಯ ನಾಯಕತ್ವದ ಬಗ್ಗೆಯೂ ಯಾವತ್ತೂ ಅಪಸ್ವರ ಎತ್ತಿದವರಲ್ಲ. ಇದೀಗ ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಳ್ಳದೆ ಇದ್ದರೂ ಸಿದ್ದರಾಮಯ್ಯ ಅವರ ಪರವಾಗಿ ಗುರುತಿಸಿಕೊಂಡಿದ್ದಾರೆ.
ವರದಿ : ಲಾವಣ್ಯ ಅನಿಗೋಳ

