ಆಳಂದ ವಿಧಾನಸಭಾ ಕ್ಷೇತ್ರದ ಮತಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಬೆಂಗಳೂರು ನಗರದ APMM ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದೆ. ಸುಮಾರು 22 ಸಾವಿರ ಪುಟಗಳ ಚಾರ್ಜ್‌ಶೀಟ್‌ನಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಮಂದಿಯನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
SIT ತನಿಖೆಯಲ್ಲಿ, 5,994 ಮತಗಳನ್ನು ಅಳಿಸಿ ಹಾಕಲು ಕಾಲ್ ಸೆಂಟರ್ ವ್ಯವಸ್ಥೆ ಬಳಸಲಾಗಿದೆ ಎಂಬುದು ಬಹಿರಂಗವಾಗಿದೆ. ಮತಕಳ್ಳತನಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಹಣ ಪಾವತಿಸಿದ್ದಾರೆಯೆಂಬುದೂ ತನಿಖೆಯಿಂದ ಬೆಳಕಿಗೆ ಬಂದಿದೆ.
ದಾಳಿ ವೇಳೆ ವಶಪಡಿಸಿಕೊಂಡ ಡಿಜಿಟಲ್ ಸಾಕ್ಷ್ಯಾಧಾರಗಳು ಮತಕಳ್ಳತನದ ಕೃತ್ಯವನ್ನು ದೃಢಪಡಿಸುತ್ತಿದ್ದು, ಈ ಅಕ್ರಮದಲ್ಲಿ ತಂದೆ–ಮಗ ಇಬ್ಬರೂ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಶಾಸಕ B.R. ಪಾಟೀಲ್ ಮತಚೋರಿ ಆರೋಪ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ B.K. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ತನಿಖೆ ಪೂರ್ಣಗೊಂಡ ಬಳಿಕ ಇದೀಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಬಂಧನ ಭೀತಿಯ ಹಿನ್ನೆಲೆಯಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಹಾಗೂ ಅವರ ಪುತ್ರ ಹರ್ಷಾನಂದ ಈಗಾಗಲೇ ಜಾಮೀನು ಪಡೆದುಕೊಂಡಿದ್ದಾರೆ.
ಇನ್ನೊಂದೆಡೆ, ಮತಚೋರಿ ಆರೋಪದ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಈ ಪ್ರತಿಭಟನೆಗೆ ಮುನ್ನವೇ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ದೊಡ್ಡ ಅಸ್ತ್ರ ಸಿಕ್ಕಂತಾಗಿದೆ.
ವರದಿ : ಲಾವಣ್ಯ ಅನಿಗೋಳ



