ನಗರ ಸಂಚಾರ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗೆ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಕಾನೂನು ಜಾರಿಗೆ ಹೊಣೆಗಾರರಾಗಿರುವ ಸಂಚಾರ ಪೊಲೀಸರು ತಾವೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಾಲನೆ ಮಾಡುತ್ತಿರುವ ಹಲವು ಪ್ರಕರಣಗಳು ನಗರದಲ್ಲಿ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಸೀಟ್ ಬೆಲ್ಟ್ ಅಥವಾ ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡುವುದು, ಚಾಲನೆಯ ವೇಳೆ ಮೊಬೈಲ್ ಫೋನ್ ಬಳಕೆ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಈ ಹಿನ್ನೆಲೆಯಲ್ಲಿ, ಸಂಚಾರ ನಿಯಮಗಳನ್ನು ನಾಗರಿಕರು ಪಾಲಿಸುವುದರ ಜೊತೆಗೆ ಕರ್ತವ್ಯದಲ್ಲಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಕಾರ್ತಿಕ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
“ಕಾನೂನು ಜಾರಿಗೊಳಿಸುವವರೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ, ಸಾರ್ವಜನಿಕರಿಗೆ ನಿಯಮ ಪಾಲನೆ ಬಗ್ಗೆ ಹೇಳುವ ಯಾವುದೇ ನೈತಿಕ ಹಕ್ಕು ಇರುವುದಿಲ್ಲ. ನಾವು ಶಿಸ್ತು ಪಾಲಿಸಿದರೆ ಮಾತ್ರ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಬಗ್ಗೆ ಗೌರವ ಮತ್ತು ಶಿಸ್ತು ಮೂಡಿಸಲು ಸಾಧ್ಯ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ನಗರ ಸಂಚಾರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ, ವಾಹನ ಚಲಾಯಿಸುವ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸಬೇಕು. ಜೊತೆಗೆ, ಎಲ್ಲ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮುಂದಿನ ದಿನಗಳಲ್ಲಿ ಯಾವುದೇ ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ, ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ



