ರಾತ್ರಿ ವೇಳೆ ನೆಮ್ಮದಿಯಾಗಿ ನಿದ್ದೆಯಲ್ಲಿದ್ದ ಪ್ರಯಾಣಿಕರನ್ನು ಭೀತಿಗೆ ತಳ್ಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಉರಿದುಹೋಗಿದೆ.
ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆಗೆ ನಂಜನಗೂಡಿನ ಹೊಸಳ್ಳಿ ಗೇಟ್ ಸಮೀಪ ಈ ಘಟನೆ ಸಂಭವಿಸಿದೆ. ಬಸ್‌ನೊಳಗೆ ಸುಮಾರು 40 ಮಂದಿ ಪ್ರಯಾಣಿಕರು ಇದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತ ಚಾಲಕ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇದರಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕೆಎಸ್‌ಆರ್‌ಟಿಸಿ ಸಂಸ್ಥೆಗೆ ಸೇರಿದ KL-15 A-2444 ನೋಂದಣಿ ಸಂಖ್ಯೆಯ ಈ ಬಸ್ ಮೈಸೂರಿನಿಂದ ಕೇರಳಕ್ಕೆ ಸಂಚರಿಸುತ್ತಿತ್ತು. ಪ್ರಯಾಣಿಕರನ್ನು ಕೆಳಗಿಳಿಸಿದ ಕೆಲವೇ ನಿಮಿಷಗಳಲ್ಲಿ ಬೆಂಕಿಯ ರಭಸ ಹೆಚ್ಚಾಗಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸುವ ವೇಳೆಗೆ ಬಸ್ ಸಂಪೂರ್ಣವಾಗಿ ನಾಶವಾಗಿತ್ತು.
ಬೆಂಕಿ ಕಾಣಿಸಿಕೊಂಡ ತಕ್ಷಣ ಪ್ರಯಾಣಿಕರು ಬೆಂಕಿ ಆರಿಸಲು ಪ್ರಯತ್ನಿಸಿದರೂ, ಬೆಂಕಿಯ ತೀವ್ರತೆಯಿಂದ ಸಾಧ್ಯವಾಗಲಿಲ್ಲ. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡದ ಕಾರಣ ಕುರಿತು ತನಿಖೆ ಮುಂದುವರಿದಿದೆ. ಒಟ್ಟಿನಲ್ಲಿ ಚಾಲಕ ಮತ್ತು ಪ್ರಯಾಣಿಕರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ




