ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ವಿವಿಧ ಹಿಂದೂ ಸಂಘಟನೆಗಳು ಬಾಂಗ್ಲಾದೇಶ ಹೈಕಮಿಷನ್ ಎದುರು ಬೃಹತ್ ಪ್ರತಿಭಟನೆ ನಡೆಸಿವೆ. ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆ, ಕೊಲೆ, ಅತ್ಯಾಚಾರ ಹಾಗೂ ಧಾರ್ಮಿಕ ಸ್ಥಳಗಳ ಧ್ವಂಸವನ್ನು ತೀವ್ರವಾಗಿ ಖಂಡಿಸಿದರು. ದೀಪು ಚಂದ್ರ ದಾಸ್‌ ಹತ್ಯೆಗೆ ತಕ್ಷಣ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯ ವೇಳೆ ಕೆಲ ಪ್ರತಿಭಟನಾಕಾರರು ಪೊಲೀಸ್ ತಡೆಗೋಡೆಗಳನ್ನು ದಾಟಿ ಬಾಂಗ್ಲಾದೇಶ ರಾಯಭಾರ ಕಚೇರಿಯೊಳಗೆ ನುಗ್ಗಲು ಯತ್ನಿಸಿದ ಪರಿಣಾಮ, ಪರಿಸ್ಥಿತಿ ಉದ್ವಿಗ್ನಗೊಂಡಿತು. ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದು, ತಡೆಗೋಡೆಗಳನ್ನು ಮುರಿದು ಒಳನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನ ವಶಕ್ಕೆ ಪಡೆದರು. ಬಾಂಗ್ಲಾದಲ್ಲಿ ಹಿಂದೂಗಳನ್ನು ಗುರಿಯಾಗಿಸಿ ಕೊಲೆಗಳು ನಡೆಯುತ್ತಿವೆ. ಹಿಂದೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ.

ಧಾರ್ಮಿಕ ಸ್ಥಳಗಳನ್ನು ಧ್ವಂಸ ಮಾಡಲಾಗುತ್ತಿದೆ. ಇಷ್ಟೆಲ್ಲಾ ಅಮಾನವೀಯ ಘಟನೆಗಳ ನಡುವೆಯೂ ಅಲ್ಲಿನ ಸರ್ಕಾರ ಮೌನ ವಹಿಸಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್‌ ಅವರ ವಿರುದ್ಧವೂ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಜೊತೆಗೆ, ಯೂನಸ್‌ ಅವರ ಭಾರತ ವಿರೋಧಿ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿದರು.

ಇಂದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಕಗ್ಗೊಲೆಯ ವಿರುದ್ಧ ಧ್ವನಿ ಎತ್ತದಿದ್ದರೆ, ನಾಳೆ ಇದೇ ಸ್ಥಿತಿ ನಮಗೂ ಎದುರಾಗಬಹುದು ಎಂದು ಪ್ರತಿಭಟನಾಕಾರರೊಬ್ಬರು ಆಕ್ರೋಶಭರಿತವಾಗಿ ಘೋಷಣೆಗಳನ್ನು ಕೂಗಿದರು. ಒಟ್ಟಿನಲ್ಲಿ, ಬಾಂಗ್ಲಾದೇಶದಲ್ಲಿ ನಡೆದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಹತ್ಯೆ ಬಳಿಕ ಉಂಟಾದ ಭಾರತ ವಿರೋಧಿ ಪ್ರತಿಭಟನೆಗಳು ಮತ್ತು ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ಹಿಂಸಾಚಾರವು, ಭಾರತದಲ್ಲೂ ತೀವ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿದ್ದು, ಎರಡೂ ದೇಶಗಳ ರಾಜತಾಂತ್ರಿಕ ಸಂಬಂಧಗಳ ಮೇಲೆ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.

ವರದಿ : ಲಾವಣ್ಯ ಅನಿಗೋಳ

About The Author