ಗೃಹಲಕ್ಷ್ಮಿ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಮಹತ್ವದ ಅಂಶವೊಂದು ಬೆಳಕಿಗೆ ಬಂದಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪೈಕಿ 1,44,056 ಮಂದಿ ಮೃತಪಟ್ಟ ಬಳಿಕವೂ ಅವರ ಬ್ಯಾಂಕ್ ಖಾತೆಗಳಿಗೆ ಒಟ್ಟು ಸುಮಾರು 7.68 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಪತ್ತೆಯಾಗಿದೆ ಎಂದು ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಕಾರ್ಯಾಗಾರ, ಪ್ರಗತಿ ಪರಿಶೀಲನಾ ಸಭೆ ಮತ್ತು ನಶೆಮುಕ್ತ ಕರ್ನಾಟಕ ಅಭಿಯಾನವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ನೇರ ನಗದು ವರ್ಗಾವಣೆ ವ್ಯವಸ್ಥೆ ಇರುವುದರಿಂದ ಫಲಾನುಭವಿಗಳು ಮೃತಪಟ್ಟ ನಂತರವೂ ಅವರ ಖಾತೆಗಳಿಗೆ ಹಣ ಜಮೆಯಾಗಿರುವುದು ಗಮನಕ್ಕೆ ಬಂದಿದೆ ಎಂದರು.
ಜಮೆಯಾದ ಹಣ ಜನರದ್ದೇ ಆಗಿದ್ದು, ಅದನ್ನು ಹಿಂಪಡೆಯಲು ಸರ್ಕಾರ ಕ್ರಮ ಕೈಗೊಂಡಿದೆ. ಗ್ಯಾರಂಟಿ ಯೋಜನೆಗಳ ಫಲ ಸರಿಯಾದ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು ಸಂಬಂಧಿಸಿದ ಸಮಿತಿಗಳ ಜವಾಬ್ದಾರಿಯಾಗಿದೆ. ಯಾವುದೇ ರೀತಿಯ ದುರುಪಯೋಗ ಅಥವಾ ಹಣ ಪೋಲಾಗದಂತೆ ತಡೆಯಬೇಕಾಗಿದೆ ಎಂದು ಎಚ್.ಎಂ. ರೇವಣ್ಣ ಹೇಳಿದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ



