Mandya: ಗ್ರಾಮಾಂತರ ಪ್ರದೇಶದಲ್ಲಿ ಸಾರ್ವಜನಿಕರಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಸರಬರಾಜು ಮಾಡುವಂತೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಾ.ಪಂ. ಇಓ ಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರುಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಸೂಚಿಸಿರುವಂತೆ ಹೋಬಳಿ ಮಟ್ಟದಲ್ಲಿ ಗ್ರಾಮ ಪಂಚಾಯತ್ ನ ನೀರು ಗಂಟಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಪಟ್ಟಿ ಮಾಡಿ ಅವುಗಳಿಗೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಮುಂದಿನ ಸಭೆಯಲ್ಲಿ ವರದಿ ಸಲ್ಲಿಸಲು ಸೂಚಿಸಿದರು.
ಬಹುಗ್ರಾಮ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಜಿಲ್ಲೆಯಾದ್ಯಂತ ಪ್ರಗತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಶುದ್ಧ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ವಹಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರುಗಳಿಗೆ ಸೂಚಿಸಿದರು.
ತಾ.ಪಂ. ಇಓ, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಜಂಟಿಯಾಗಿ ತಮ್ಮ ಇಲಾಖೆಗೆ ಸಂಬಂಧಿಸಿದ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಕುಡಿಯುವ ನೀರಿನ ಮೂಲಗಳನ್ನು ರಾಸಾಯನಿಕ ಮತ್ತು ಮೈಕ್ರೋಬಯಾಲಜಿ ಪರೀಕ್ಷೆಗೆ ಒಳಪಡಿಸಿ ನೀರು ಶುದ್ಧವಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.
ಈಗಾಗಲೇ ಕೃಷ್ಣರಾಜಪೇಟೆ ತಾಲ್ಲೂಕಿನ ಎಲ್ಲಾ ಕೊಳವೆ ಬಾವಿಗಳಿಗೆ ರಕ್ಷಣಾ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಉಳಿದ ತಾಲ್ಲೂಕುಗಳು ಸಹ ಅದೇ ಮಾದರಿಯಲ್ಲಿ ರಕ್ಷಣಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.




