‘ಕೈ’ ಯಿಂದಲೇ ವೋಟ್‌ ಚೋರಿ : ಅಪ್ರಾಪ್ತರಿಗೂ ಮತದಾನ ಹಕ್ಕು?

ದೇಶಾದ್ಯಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ವಿರುದ್ಧ ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ, ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಇಳಕಲ್ಲ ತಾಲೂಕಿನ ಮುರಡಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರಿಂದಲೇ ಗಂಭೀರ ಅಕ್ರಮಗಳು ನಡೆದಿವೆ ಎಂಬ ಆರೋಪ ಕೇಳಿಬಂದಿದೆ.

ಹುನಗುಂದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಮಂಜುನಾಥ ಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಮತದಾರರ ಪಟ್ಟಿಗೆ ಸೇರಿಸುವುದು ಕಾನೂನುಬಾಹಿರ ಎಂದು ಹೇಳಿದರು. ಆದರೆ, ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮುರಡಿ ಗ್ರಾಮದಲ್ಲಿ 18 ವರ್ಷ ತುಂಬದ ಕನಿಷ್ಠ 8 ಮಂದಿ ಅಪ್ರಾಪ್ತರನ್ನು ಅನಧಿಕೃತವಾಗಿ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಪಿಸಿದರು.

ಮುರಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮಗನೇ ಈ ಅಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಅವರು ಆರೋಪಿಸಿದರು. ಅಪ್ರಾಪ್ತರಿಗೂ ಹಾಗೂ ಅವರ ಪೋಷಕರಿಗೂ ತಿಳಿಯದಂತೆ, ತನ್ನ ತಂದೆಯ ಮೊಬೈಲ್ ಸಂಖ್ಯೆಗೆ ಒಟಿಪಿ ಬರುವಂತೆ ಮಾಡಿಕೊಂಡು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ಹೇಳಿದರು.

ಈ ಕುರಿತು ಹುನಗುಂದ ತಹಸೀಲ್ದಾರ್‌ ಅವರಿಗೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ, ಇದುವರೆಗೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಪ್ರಕರಣದ ಕುರಿತು ಸಮಗ್ರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ, ಪಕ್ಕದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮತದಾರರ ಹೆಸರುಗಳು ಮುರಡಿ ಗ್ರಾಮದ ಮತದಾರರ ಪಟ್ಟಿಯಲ್ಲಿ ಸೇರಿಸಿರುವುದೂ ಬೆಳಕಿಗೆ ಬಂದಿದೆ. ಕುಷ್ಟಗಿಯ ಕನಿಷ್ಠ 8 ಮಂದಿ ಮತದಾರರ ಹೆಸರುಗಳು ಎರಡೂ ಕ್ಷೇತ್ರಗಳ ಪಟ್ಟಿಯಲ್ಲಿ ದಾಖಲಾಗಿದ್ದು, ಇದು ಗಂಭೀರ ಅಕ್ರಮವಾಗಿದೆ ಎಂದು ಹೇಳಿದರು.

15 ರಿಂದ 17 ವರ್ಷದ ಅಪ್ರಾಪ್ತರ ಹೆಸರುಗಳನ್ನೂ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ದೇಶಾದ್ಯಂತ ಮತಚೋರಿ ಆರೋಪ ಮಾಡುತ್ತಿದ್ದರೆ, ಹುನಗುಂದದಲ್ಲಿ ಅವರದೇ ಪಕ್ಷದ ಕಾರ್ಯಕರ್ತರು ಇಂತಹ ಅಕ್ರಮಗಳಲ್ಲಿ ತೊಡಗಿರುವುದು ವಿಪರ್ಯಾಸಕರ ಸಂಗತಿಯಾಗಿದೆ ಎಂದು ಮಂಜುನಾಥ ಗೌಡ ಟೀಕಿಸಿದರು. ಈ ಎಲ್ಲಾ ಅಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

About The Author