ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲವಾದರೂ, ಸಿಎಂ ಕುರ್ಚಿ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ ಮನವಿ ಮಾಡಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಲಾಗುತ್ತದೆಯೇ ಅಥವಾ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಲಾಗುತ್ತದೆಯೇ ಎಂಬುದನ್ನು ಹೈಕಮಾಂಡ್ ಖಡಾ ಖಂಡಿತವಾಗಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಯಾವುದೇ ನಿರ್ಧಾರವಾಗಿರಲಿ, ಅದನ್ನು ಒಂದೇ ಮಾತಿನಲ್ಲಿ ಹೇಳಿಬಿಡಬೇಕು. ಸಿದ್ದರಾಮಯ್ಯ ಅವರನ್ನು ಐದು ವರ್ಷಗಳ ಕಾಲವೇ ಮುಖ್ಯಮಂತ್ರಿ ಆಗಿ ಮುಂದುವರಿಸುವುದಾದರೂ ಸರಿ, ಅಥವಾ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವುದಾದರೂ ಸರಿ – ಸ್ಪಷ್ಟತೆ ಅಗತ್ಯ ಎಂದು ಹೇಳಿದರು.
ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿದರೂ ಸ್ವಾಗತವಿದೆ. ಅಗತ್ಯವಿದ್ದರೆ ಸಾಮಾನ್ಯ ಕಾರ್ಯಕರ್ತನನ್ನೇ ಮುಖ್ಯಮಂತ್ರಿ ಮಾಡಿದರೂ ಒಪ್ಪಿಕೊಳ್ಳುತ್ತೇವೆ. ಆದರೆ ನಿರಂತರ ಅಸ್ಪಷ್ಟತೆಯಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಮನುಷ್ಯನ ಸಹನೆಗೆ, ಮಿತಿ ಎನ್ನುವುದು ಇರತ್ತೆ. ಆ ಮಿತಿ ಮೀರಿದಾಗ ಸಹನೆಯ ಕಟ್ಟೆಯೊಡೆಯುವ ಸಂದರ್ಭ ಬರುತ್ತದೆ ಎಂದು ಹೇಳುವ ಮೂಲಕ ಪಕ್ಷದ ನಾಯಕತ್ವಕ್ಕೆ ಎಚ್ಚರಿಕೆಯ ಸಂದೇಶ ನೀಡಿದರು.
ವರದಿ : ಲಾವಣ್ಯ ಅನಿಗೋಳ



