CM – DCM ಬಣದ ಪೈಪೋಟಿ, R v/s R ಗೆಲ್ಲೋದು ಯಾರು?

ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಇದೇ ಜನವರಿ 29ರಂದು ಚುನಾವಣೆ ನಡೆಯಲಿದ್ದು, ಈ ಹುದ್ದೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿರುವ ಶಾಸಕ ಕೆ.ಎನ್. ರಾಜಣ್ಣ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೋದರ ಸಂಬಂಧಿ, ವಿಧಾನ ಪರಿಷತ್ ಸದಸ್ಯ ಎಸ್. ರವಿ ನಡುವೆ ಪೈಪೋಟಿ ಉಂಟಾಗಿದೆ.

ಇದರ ನಡುವೆ, ಬ್ಯಾಂಕಿಗೆ ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಚಹಾ ಕೂಟ ಆಯೋಜಿಸಿದ್ದರು. ಈ ಸಭೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಒಮ್ಮತದಿಂದ ಆಯ್ಕೆ ಪ್ರಕ್ರಿಯೆ ನಡೆಸುವ ಕುರಿತು ಚರ್ಚೆ ನಡೆದಿದೆ. ಈ ಬೆಳವಣಿಗೆಯಿಂದಾಗಿ ಕೆ.ಎನ್. ರಾಜಣ್ಣ ಅವರು ಮೂರನೇ ಬಾರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗುವ ಸಾಧ್ಯತೆ ಹೆಚ್ಚಾಗಿದೆ.

ಚುನಾವಣೆ ಪ್ರಕ್ರಿಯೆ ಜನವರಿ 29ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆಯಿಂದ ಆರಂಭವಾಗಲಿದ್ದು, ಮಧ್ಯಾಹ್ನ 12.30ಕ್ಕೆ ಮತದಾನ ನಡೆಯಲಿದೆ. ಒಟ್ಟು 21 ನಿರ್ದೇಶಕರ ಪೈಕಿ ಮೈಸೂರು–ಚಾಮರಾಜನಗರ, ಬಾಗಲಕೋಟೆ ಹಾಗೂ ಕೋಲಾರ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್‌ಗಳನ್ನು ಹೊರತುಪಡಿಸಿ ಉಳಿದ 18 ಡಿಸಿಸಿ ಬ್ಯಾಂಕುಗಳು ಈಗಾಗಲೇ ತಮ್ಮ ನಾಮನಿರ್ದೇಶಿತರನ್ನು ಕಳುಹಿಸಿವೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕವೂ ಸಹಕಾರಿ ಕ್ಷೇತ್ರದಲ್ಲಿ ರಾಜಣ್ಣ ಅವರ ಪ್ರಭಾವ ಮುಂದುವರಿದಿದ್ದು, ಪ್ರಸ್ತುತ ಅವರು ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ಎರಡು ಬಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅವರು, 2001ರ ಅಕ್ಟೋಬರ್‌ನಿಂದ 2005ರ ಏಪ್ರಿಲ್‌ವರೆಗೆ ಹಾಗೂ 2015ರ ಆಗಸ್ಟ್‌ನಿಂದ 2020ರ ಸೆಪ್ಟೆಂಬರ್‌ವರೆಗೆ ಅಧ್ಯಕ್ಷರಾಗಿದ್ದರು. ಇದೀಗ ಮತ್ತೊಂದು ಅವಧಿಗೆ ಅಧ್ಯಕ್ಷರಾಗುವ ನಿರೀಕ್ಷೆಯಲ್ಲಿದ್ದಾರೆ.

ಇನ್ನೊಂದೆಡೆ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಡಿಸಿಸಿ ಬ್ಯಾಂಕ್‌ನಿಂದ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿರುವ ಎಸ್. ರವಿ ಅವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ರವಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ಉದ್ದೇಶದಿಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಎರಡು ಬಾರಿ ಬೆಂಗಳೂರಿನಲ್ಲಿ ಕೆ.ಎನ್. ರಾಜಣ್ಣ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ವರದಿ : ಲಾವಣ್ಯ ಅನಿಗೋಳ

About The Author