CM ಸಿದ್ದರಾಮಯ್ಯಗೆ MUDA ಹಗರಣದಲ್ಲಿ ಬಿಗ್ ರಿಲೀಫ್

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ಕ್ಲೀನ್‌ಚಿಟ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುದ್ರೆ ಒತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ದೊಡ್ಡ ನಿರಾಳತೆಯಾಗಿದೆ. ಇನ್ನು ಲೋಕಾಯುಕ್ತ ಬಿ–ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ಸ್ನೇಹಮಯಿ ಕೃಷ್ಣಗೆ ಸ್ಪಷ್ಟ ಹಿನ್ನಡೆಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಸಲ್ಲಿಸಿದ್ದ ಬಿ–ರಿಪೋರ್ಟ್ ಅನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ವಾದ–ಪ್ರತಿವಾದ ಆಲಿಸಿದ ನ್ಯಾಯಾಲಯ, ಲೋಕಾಯುಕ್ತ ವರದಿಯನ್ನು ಪುರಸ್ಕರಿಸಿ ಜನವರಿ 2 ಮಹತ್ವದ ಆದೇಶ ಹೊರಡಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂಮಾಲೀಕ ದೇವರಾಜು ವಿರುದ್ಧ ಬಿ–ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಆದರೆ ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳ ಮೇಲಿನ ತನಿಖೆ ಮುಂದುವರಿಸಲು ಕೋರ್ಟ್ ಸೂಚಿಸಿದೆ. ಈ ಆದೇಶದಿಂದ ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಳರಾಗಿದ್ದಾರೆ. ಆದರೆ ಸ್ನೇಹಮಯಿ ಕೃಷ್ಣ ಅವರಿಗೆ ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಅವಕಾಶ ಇನ್ನೂ ಉಳಿದಿದೆ.

ರಾಜಕೀಯ ಜೀವನದಲ್ಲಿ ಕ್ಲೀನ್ ಹ್ಯಾಂಡ್ ನಾಯಕ ಎಂದು ಗುರುತಿಸಿಕೊಂಡಿರುವ ಸಿದ್ದರಾಮಯ್ಯಗೆ ಮುಡಾ ಹಗರಣ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ ಕೋರ್ಟ್ ನೀಡಿರುವ ಇಂದಿನ ಆದೇಶ ಸಿಎಂಗೆ ಮಹತ್ವದ ರಿಲೀಫ್ ನೀಡಿದೆ. ಒಟ್ಟಿನಲ್ಲಿ, ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಬಿ–ರಿಪೋರ್ಟ್‌ಗೆ ಕೋರ್ಟ್ ಮಾನ್ಯತೆ ನೀಡಿರುವುದರಿಂದ ಸದ್ಯಕ್ಕಂತೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟದಿಂದ ಹೊರಬಂದಂತಾಗಿದೆ.

ವರದಿ : ಲಾವಣ್ಯ ಅನಿಗೋಳ

About The Author