40 ಮಂದಿ ಪ್ರಯಾಣಿಸುತ್ತಿದ್ದ ಸ್ಲೀಪರ್ ಕೋಚ್ ಬಸ್ ಧಗಧಗ

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಜಿಲ್ಲೆಯ ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಈ ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ.

ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್ ಸಂಸ್ಥೆಗೆ ಸೇರಿದ ಈ ಬಸ್ ಹೊಸನಗರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. ಅರಸಾಳು ಹಾಗೂ ಸುಡೂರು ಗ್ರಾಮಗಳ ಮಧ್ಯೆ ಚಲಿಸುತ್ತಿದ್ದ ವೇಳೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ವ್ಯಾಪಕವಾಗಿ ಹರಡುತ್ತಿದ್ದಂತೆ ಚಾಲಕ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ.

ಘಟನೆ ವೇಳೆ ಬಸ್‌ನಲ್ಲಿ ಚಾಲಕ ಸೇರಿದಂತೆ ಒಟ್ಟು 40 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಅನೇಕ ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಅಪಘಾತದ ಪರಿಣಾಮ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದು ಸುಟ್ಟು ಕರಕಲಾಗಿದೆ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ, ಆ್ಯಂಬುಲೆನ್ಸ್ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ವರದಿ : ಲಾವಣ್ಯ ಅನಿಗೋಳ

About The Author