ದೆಹಲಿಯಲ್ಲಿ JDS ಲೀಡರ್ಸ್ ಹೊಸ ರಣತಂತ್ರ

ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ JDS ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನವದೆಹಲಿಯಲ್ಲಿ ಮಹತ್ವದ ಸಂಘಟನಾ ಸಭೆ ನಡೆಯಿತು. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ, JDS ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಕೆಳಹಂತದಿಂದ ಸಂಘಟಿಸುವುದು, ಹೊಸ ಕಾರ್ಯಕರ್ತರನ್ನು ರೂಪಿಸುವುದು ಹಾಗೂ ಪಕ್ಷಕ್ಕೆ ಹೊಸ ಚೈತನ್ಯ ತುಂಬುವ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಯಿತು. ಸಭೆಯಲ್ಲಿ ಸಂಘಟನೆಗೆ ಸ್ಪಷ್ಟ ರೂಪುರೇಷೆಗಳನ್ನು ಸಿದ್ಧಪಡಿಸಿ ಕಾರ್ಯಾಚರಣೆಗೆ ಇಳಿಯುವಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದರು.

ಈ ವೇಳೆ ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳು ಹಾಗೂ ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಸಮಾವೇಶಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಇದರ ಭಾಗವಾಗಿ ಫೆಬ್ರವರಿ 27ರಂದು ವಿಜಯಪುರ–ಬಾಗಲಕೋಟೆ ಜಿಲ್ಲಾ ಸಮಾವೇಶವನ್ನು ವಿಜಯಪುರದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಇದೇ ವೇಳೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳ ಪಟ್ಟಿ ಸಲ್ಲಿಸಿ ಅವುಗಳನ್ನು ಸಾಕಾರಗೊಳಿಸುವಂತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸಭೆಯ ಗಮನಕ್ಕೆ ತಂದರು. ಈ ಸಂದರ್ಭ ವಿವಿಧ ಜಿಲ್ಲೆಗಳ ಮುಖಂಡರು ತಮ್ಮ ಪ್ರದೇಶದ ಅಗತ್ಯ ಅಭಿವೃದ್ಧಿ ಕಾಮಗಾರಿಗಳ ಪಟ್ಟಿಯನ್ನು ಸಲ್ಲಿಸಿದರು.

ವರದಿ : ಲಾವಣ್ಯ ಅನಿಗೋಳ

About The Author