ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಹತ್ವದ ಕಾನೂನು ಜಯ ದೊರೆತಿದೆ.
ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಸಲ್ಲಿಸಿದ್ದ ಎಲೆಕ್ಷನ್ ಪಿಟಿಷನ್ ಅನ್ನು ಕಲಬುರ್ಗಿ ಹೈಕೋರ್ಟ್ ಪೀಠವು 2025ರ ಜುಲೈ 18ರಂದು ವಜಾಗೊಳಿಸಿತ್ತು. ಅರ್ಜಿಯನ್ನು ಆಧಾರರಹಿತ ಎಂದು ಪರಿಗಣಿಸಿದ ಹೈಕೋರ್ಟ್, ಅರ್ಜಿದಾರರಿಗೆ ದಂಡವೂ ವಿಧಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಮುಶ್ರೀಫ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದೆ. ಅಲ್ಲದೆ, ಸಲ್ಲಿಸಿದ್ದ ರಿವ್ಯೂ ಪಿಟಿಷನ್ ಕೂಡ ವಜಾಗೊಂಡಿದ್ದು, ಕಾಂಗ್ರೆಸ್ ನಾಯಕನಿಗೆ ಹಿನ್ನಡೆಯಾಗಿದೆ.
ತೀರ್ಪಿನ ನಂತರ ಶಾಸಕ ಯತ್ನಾಳ್ ಸಾಮಾಜಿಕ ಜಾಲತಾಣ Xನಲ್ಲಿ ಪ್ರತಿಕ್ರಿಯೆ ನೀಡಿ, ‘ಸತ್ಯಮೇವ ಜಯತೆ’ ಎಂದು ಪೋಸ್ಟ್ ಮಾಡಿದ್ದಾರೆ. ಸತ್ಯವನ್ನು ಮರೆಮಾಚಲು ಯಾರಿಂದಲೂ ಸಾಧ್ಯವಿಲ್ಲ. ವಿಜಯಪುರದ ಜನತೆ ಸದಾ ನನ್ನೊಂದಿಗಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಅವರು ತಿಳಿಸಿದ್ದಾರೆ.
ತಮ್ಮ ಪೋಸ್ಟ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಯತ್ನಾಳ್ ಟೀಕೆ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯದ ಸಮಯವನ್ನು ಅನಗತ್ಯ ಅರ್ಜಿಗಳ ಮೂಲಕ ವ್ಯರ್ಥ ಮಾಡುವವರಿಗೆ ಕೋರ್ಟ್ ದಂಡ ವಿಧಿಸಿರುವುದು ಸರಿಯಾದ ಕ್ರಮ ಎಂದು ಅವರು ಹೇಳಿದ್ದಾರೆ.
ಕೇವಲ ಜಯದ ಸಂಭ್ರಮಕ್ಕೆ ಸೀಮಿತವಾಗದೆ, ತಮ್ಮ ಮೇಲೆ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ ಆರೋಪ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸೂಚನೆಯನ್ನು ಯತ್ನಾಳ್ ನೀಡಿದ್ದಾರೆ. ಸುಳ್ಳು ಆರೋಪ ಹೊರಿಸಿದವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಂಡು, ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದು ಅವರು ಎಚ್ಚರಿಸಿದ್ದಾರೆ.
ವರದಿ : ಲಾವಣ್ಯ ಅನಿಗೋಳ




