ಬಿಸಿಲ ಧಗೆಯ ನಡುವೆ ಗುಡುಗು ಸಹಿತ ಭಾರೀ ಮಳೆ!

ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ನಡುವೆಯೇ ಅಕಾಲಿಕ ಮಳೆ ಚಟುವಟಿಕೆ ಹೆಚ್ಚಾಗಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಹಲವೆಡೆ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ 2 ರಿಂದ 3 ದಿನಗಳವರೆಗೆ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಕರಾವಳಿ ಪ್ರದೇಶಗಳಲ್ಲಿ ಕೆಲವೇ ಗಂಟೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಿನ್ನೆ ಕೂಡ ರಾಜ್ಯದ ಹಲವೆಡೆ ಮಳೆಯಾಗಿದ್ದು, ವಿಜಯಪುರ ಜಿಲ್ಲೆಯ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ವೇಳೆ ಬಿರುಗಾಳಿ ಸಹಿತ ಅಕಾಲಿಕ ಮಳೆ ಸುರಿದಿದೆ.

ತಿಕೋಟಾ ಮತ್ತು ಚಡಚಣ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆಯೊಂದಿಗೆ ಗಾಳಿ ಬೀಸಿದ ಪರಿಣಾಮ ರೈತರಲ್ಲಿ ಆತಂಕ ಹೆಚ್ಚಾಗಿದೆ. ತಿಕೋಟಾ ತಾಲೂಕು ದ್ರಾಕ್ಷಿ ಬೆಳೆಗೆ ಪ್ರಸಿದ್ಧಿ ಪಡೆದಿದ್ದು, ಅಕಾಲಿಕ ಮಳೆಯಿಂದ ದ್ರಾಕ್ಷಿ, ಜೋಳ, ಕಡಲೆ ಹಾಗೂ ಗೋಧಿ ಬೆಳೆಗಳಿಗೆ ಹಾನಿ ಸಂಭವಿಸಿದೆ. ಈಗಾಗಲೇ ಕಟಾವಿಗೆ ಬಂದಿದ್ದ ಬೆಳೆಗಳ ಮೇಲೆ ಮಳೆಯ ಹೊಡೆತ ಬಿದ್ದಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ, ಬಿಸಿಲಿನ ತಾಪದ ನಡುವೆ ಮಳೆಯ ಅಲರ್ಟ್ ಕೂಡ ಜಾರಿಯಾಗಿದೆ. ಹವಾಮಾನ ಇಲಾಖೆಯ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ವರದಿ : ಲಾವಣ್ಯ ಅನಿಗೋಳ

About The Author